ಕೋವಿಡ್ 19 ಕುರಿತು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 5  ಗಡಿ ಜಿಲ್ಲೆಗಳ ಕೊರೊನಾ ಸ್ಥಿತಿಗತಿ ಕುರಿತು ವಿಡಿಯೊ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದುಕೊಂಡರಲ್ಲದೆ, ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜಿಲ್ಲೆಯ ಪಾಸಿಟಿವಿಟಿ ದರ, ಮರಣ ಪ್ರಮಾಣ, ಆಸ್ಪತ್ರೆ ದಾಖಲಾತಿ ವಿವರ, ಲಸಿಕೆ ಕಾರ್ಯಕ್ರಮದ ಪ್ರಗತಿಯ ಮಾಹಿತಿ ಪಡೆದು, ನಿರ್ದೇಶನ ನೀಡಿದರು.

ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದಶನ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದರು.

ಈ ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು. ಶೇ. 35 ರಷ್ಟು ಲಸಿಕೆಯ ಪ್ರಮಾಣ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಶೇ. 100 ರಷ್ಟು ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

More News

You cannot copy content of this page