ದಾವಣಗೆರೆ: ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ. ಅವರನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಲು ಶ್ರಮಿಸುತ್ತಾರೆ ಎಂದು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅಭಿಪ್ರಾಯಪಟ್ಟರು.
ದಾವಣಗೆರೆ ನಗರದಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಕನ್ನಡ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೇ ವೇಳೆ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ದಾವಣಗೆರೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಉತ್ತಮ ಶಿಕ್ಷಕ-ಶಿಕ್ಷಕಿಯನ್ನು ಜಿಲ್ಲಾಡಳಿತ ಪ್ರತಿ ವರ್ಷ ಗುರುತಿಸಿ ಪಟ್ಟಿ ನೀಡಿದರೆ, ಅವರಿಗೆ ವೈಯಕ್ತಿಕವಾಗಿ ಹತ್ತು ಸಾವಿರ ರೂಪಾಯಿಗಳ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಈ ಕಾರ್ಯ ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿನಾಗಿರುವ ತನಕ ಮಾಡುತ್ತೇನೆ ಎಂದು ಭರವಸೆ ನೀಡುವ ಮೂಲಕ ಶಿಕ್ಷಕರಲ್ಲಿ ಅತ್ಮಸ್ಥೈರ್ಯ ತುಂಬಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎ.ರವೀಂದ್ರನಾಥ ವಹಿಸಿದ್ದರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.




