ಬೆಂಗಳೂರು: ಎನ್.ಇ.ಪಿ ( ನ್ಯೂ ಎಜುಕೇಶನ್ ಪಾಲಿಸಿ) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬಿ.ಬಿ.ಎಂ.ಪಿ ಆಯೋಜಿಸಿದ್ದ ಭಾರತದ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ 161 ನೇ ಜಯಂತಿ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.
ಪ್ರೌಢಶಿಕ್ಷಣದ ಕುರಿತು ಸಮಿತಿ ರಚಿಸಿ ಅನುಷ್ಠಾನದ ಬಗ್ಗೆ ತೀರ್ಮಾನಿಸಲಾಗುವುದು. ಯಾರೂ ಕೂಡ ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.
ನಿನ್ನೆಯಷ್ಟೇ ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರು ನಗರಕ್ಕೆ ನೂರಾರು ವಿದ್ಯಾರ್ಥಿಗಳು ಆಗಮಿಸಿ, ನೂತನ ಶಿಕ್ಷಣ ನೀತಿಯ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ಸಂದರ್ಭದಲ್ಲಿ ವಿಧಾನ ಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದ ಹಲವಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದರು.