ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಿಂದ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟಂಬರ್ 24 ರಂದು ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಹಾಗೂ ಮೋದಿ ವಾಷಿಂಗ್ಟನ್ ನಲ್ಲಿ ಭೇಟಿ ಮಾಡಲಿದ್ದು, ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದ ಕುರಿತು ಚರ್ಚೆ ನಡೆಸಲಿದ್ದಾರೆ.
ದೇಶದ ರಕ್ಷಣೆ ಮತ್ತು ಭದ್ರತೆ, ವಾಣಿಜ್ಯ ವಹಿವಾಟು, ಬಂಡವಾಳ ಹೂಡಿಕೆ ವಿಷಯದಲ್ಲಿ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಭಾಲ್, ವಿದೇಶಾಂಗ ಕಾರ್ಯದರ್ಶಿ ಇರಲಿದ್ದಾರೆ. ಈ ಸಂದರ್ಭದಲ್ಲಿ ಅಫಘಾನಿಸ್ತಾನದ ಬೆಳವಣಿಗೆಗಳನ್ನು ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಇದೇ ಸಂದರ್ಭದಲ್ಲಿ ಮೋದಿ ಅವರು ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಪ್ರದಾನಿ ಬುಧವಾರ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದು, ಭಾನುವಾರ ಹಿಂತಿರುಗಲಿದ್ದಾರೆ.