ಬೆಳಗಾವಿಗೆ ಸರ್ಕಾರಿ ಕಚೇರಿಗಳ ಸ್ಥಳಾಂತರ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರ

ಬೆಳಗಾವಿ: ಅಕ್ಟೋಬರ್ 3 ರಿಂದ ಸಕ್ಕರೆ ನಿರ್ದೇಶನಾಲಯ ಬೆಳಗಾವಿಯಲ್ಲಿ ಕಾರ್ಯಾರಂಭ ಮಾಡಲಿದೆ. ಡಿಸೆಂಬರ್ ನಲ್ಲಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು. ಆ ವೇಳೆಗೆ ಸಾಧ್ಯವಿರುವಷ್ಟು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಬಿಡುವಿಲ್ಲದ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019- 20 ನೇ ಸಾಲಿನಲ್ಲಿ ಬೆಳಗಾವಿಯಲ್ಲಿ ಅತ್ಯಧಿಕ ಮಳೆಯಾಗಿ ಮನೆಗಳು ಹಾಗೂ ಬೆಳೆಗಳು ಹಾನಿಗೊಳಗಾಗಿವೆ. ಆ ಸಂದರ್ಭದಲ್ಲಿ ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಹಲವು ಸೌಲಭ್ಯಗಳನ್ನು ಪ್ರಕಟಿಸಿದ್ದರು. ಒಟ್ಟು 44205 ಮನೆಗಳಿಗೆ ಪರಿಹಾರ ನೀಡುವ ಕಾರ್ಯ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಪರಿಹಾರ ಪಾವತಿಗೆ ತೊಡಕಿರುವ ಅಂಶಗಳ ಬಗ್ಗೆ ಕಳೆದ ಬಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ ಇಲಾಖೆ ಕೋರಿರುವ ವಿವರಗಳನ್ನು ಒದಗಿಸಿ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ಮಾಡಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಕಬ್ಬು ಬೆಳೆಗಾರರಿಗೆ ಬಾಕಿ ಹಣ
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಸಂಬಂಧಪಟ್ಟಂತೆ ಈಗಾಗಲೇ ಮಾತುಕತೆ ನಡೆದಿದೆ. ಬಾಕಿ ಹಣವನ್ನು ನೀಡದಿದ್ದರೆ ಕಾನೂನಾತ್ಮಕವಾಗಿ ಕ್ರಮ ಜರುಗಿಸಲಾಗುವುದು. ಈ ಮಧ್ಯೆ ಸಕ್ಕರೆ ಕಾರ್ಖಾನೆಗಳು, ಸಕ್ಕರೆ ನಿರ್ದೇಶನಾಲಯ ಹಾಗೂ ಅಪೆಕ್ಸ್ ಬ್ಯಾಂಕ್ ಅವರೊಟ್ಟಿಗೆ ಮಾತುಕತೆ ನಡೆಸಿ ಹಣ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಭಾರತ್ ಬಂದ್ ಬೇಡ
ಭಾರತ್ ಬಂದ್ ನಡೆಸುವುದು ಸೂಕ್ತವಲ್ಲ. ಕೋವಿಡ್ ನಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಡಬೇಕು. ಹೀಗಾಗಿ ಭಾರತ್ ಬಂದ್ ಬೇಡ ಎಂದು ರೈತ ಸಂಘಟನೆಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮೋಯಿ ಮನವಿ ಮಾಡಿದರು.

More News

You cannot copy content of this page