ಬೆಂಗಳೂರು: ಬೆಂಗಳೂರು ಉಸ್ತುವಾರಿಗಾಗಿ ಸಚಿವರಿಬ್ಬರ ನಡುವಿನ ಗುದ್ದಾಟಕ್ಕೆ ಮುಖ್ಯಮಂತ್ರಿ ಅವರು ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ಕೊಡಬೇಕು ಎಂಬುದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಸಚಿವರ ಜೊತೆ ಸೌಹಾರ್ದಯುತವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು. ಎಲ್ಲರು ನಮ್ಮವರೇ, ಯಾವುದೇ ರೀತಿಯ ತೊಂದರೆ ಆಗದ ರೀತಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ನಗರ ಬಹಳ ಮಹತ್ವದಾದದ್ದು, ಇದರ ಬಗ್ಗೆ ಎಲ್ಲರ ಜೊತೆ ಚರ್ಚಿಸಿ, ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಬಳಿ ಯಾವುದೇ ರೀತಿಯ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ಪ್ರಯತ್ನ ನಡೆಸಿದರೂ ಫಲಿಸಲಿಲ್ಲ ಎಂದು ತಿಳಿಸಿದರು.
ಆದರೆ ಅವರು ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿದ್ದರಿಂದ ಭೇಟಿ ಮಾಡಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ
ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸಮಸ್ಯೆ ಹೆಚ್ಚಾಗುತ್ತಿದೆ, ಈ ಸಂಬಂಧ ಇನ್ನಷ್ಟು ಸಮಸ್ಯೆ ತಲೆದೋರಬಾರದು ಎಂಬ ಉದ್ದೇಶದಿಂದ ಕೇಂದ್ರ ಗಣಿ ಸಚಿವರನ್ನು ಭೇಟಿ ಮಾಡಿ, ಸುದೀರ್ಘವಾದಿ ಚರ್ಚಿಸಲಾಗಿದೆ. ನಮ್ಮ ಬೇಡಿಕೆ ಏನಿದೆ ಎನ್ನುವುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ರಾಜ್ಯದ ಬೇಡಿಕೆಗೆ ಅನುಗುಣವಾಗಿ ಎರಡ್ಮೂರು ಮೈನಿಂಗ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ನಾಗರಿಕ ವಿಮಾನಯಾನ ಸಚಿವರ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಮತ್ತು ಅಧಿಕಾರಿಗಳ ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಿದರು.