ಬೆಂಗಳೂರು : ಮಹಿಳೆಯರು ಸ್ವಂತ ಉದ್ಯಮಗಳನ್ನು ಆರಂಭಿಸಲು ಮುಂದಾದರೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲು ಸಿದ್ದ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಆಶ್ವಾಸನೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ನಡೆದ ‘ಕೈಗಾರಿಕಾ ಆದಾಲತ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೆಂಬರ್ 18 ರಂದು ಅಂತರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದಂದು ನಡೆಯಲಿರುವ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮದ ‘ಕೈಪೀಡಿ’ ಬಿಡುಗಡೆ ಮಾಡುವ ಮೂಲಕ ಮಹಿಳಾ ಉದ್ಯಮಿಗಳಿಗೆ ಸಚಿವರು ಈ ಭರವಸೆ ನೀಡಿದರು.
ಪ್ರತಿಯೊಬ್ಬ ಮಹಿಳಾ ಉದ್ಯಮಿಗಳು ಸ್ವಾವಲಂಬನೆಯಾಗಬೇಕು ಎಂಬುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳ ಸಂಘಗಳ (UBUNTU) ಒಕ್ಕೂಟದ ನಿಯೋಗದೊಂದಿಗೆ ಸಂವಾದ ನಡೆಸಿದ ಸಚಿವ ನಿರಾಣಿ, ಅವರು, ನಮ್ಮ ಸರ್ಕಾರವು ಮಹಿಳೆಯರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಲು ಬದ್ಧವಾಗಿದೆ. ನಾವು ಮಹಿಳಾ ಉದ್ಯಮಿಗಳಿಗೆ ಸಹಕಾರ ಮತ್ತು ಬೆಂಬಲವನ್ನು ನೀಡುತ್ತೇವೆ. ಜೊತೆಗೆ ಅಗತ್ಯ ಮಾರ್ಗದರ್ಶನ ಮತ್ತು ಸಹಾಯವನ್ನು ನೀಡುತ್ತೇವೆ. ಮಹಿಳೆಯರನ್ನು ಸಬಲೀಕರಣಗೊಳಿಸುವುದು ಎಂದರೆ, ನಮ್ಮ ಸಮಾಜವನ್ನು ಬಲಗೊಳಿಸಿದಂತೆ ಎಂದು ನಾವು ಭಾವಿಸುತ್ತೇವೆ ಎಂದರು.
ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ನೇತೃತ್ವದ UBUNTU ಅನ್ನು ನಾನು ಅಭಿನಂದಿಸುತ್ತೇನೆ, ಮಹಿಳೆಯರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಿದ್ದಕ್ಕಾಗಿ, ಅವರು ಯಶಸ್ಸನ್ನು ಸಾಧಿಸಲು ಸಹಾಯ ಮಾಡಿದ್ದಾರೆ. ಕರ್ನಾಟಕವು ಮಹಿಳಾ ಉದ್ಯಮಿಗಳಿಗೆ ಅತ್ಯುತ್ತಮ ಅವಕಾಶಗಳನ್ನು ನೀಡುತ್ತದೆ ಎಂದು ತಿಳಿಸಿದರು.
ನಮ್ಮ ಸರ್ಕಾರವು ಕೈಗಾರಿಕೆಗಳನ್ನು ಉತ್ತೇಜಿಸಲು ಸಬ್ಸಿಡಿಗಳು ಮತ್ತು ಪ್ರೋತ್ಸಾಹಕಗಳನ್ನು ಒಳಗೊಂಡಂತೆ ಅನೇಕ ರಿಯಾಯಿತಿಗಳನ್ನು ನೀಡುತ್ತದೆ. ನಾವು ಮಹಿಳಾ ಉದ್ಯಮಿಗಳಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡಲು ಬದ್ಧರಾಗಿದ್ದೇವೆ ಎಂದು ಸಚಿವೆ ನಿರಾಣಿ ಭರವಸೆ ನೀಡಿದರು.