ಮುಂಬೈ: ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆಯಬೇಕು ಎಂದು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅಭಿಪ್ರಾಯಪಟ್ಟಿದ್ದಾರೆ.
ಮುಂಬೈನಲ್ಲಿ ನಡೆದ ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ ಆಫ್ ಇಂಡಿಯಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದೇ 24ರಂದು ವಿಶ್ವಕಪ್ ವೇಳಾಪಟ್ಟಿಯಂತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ, ಆದರೆ, ಇತ್ತೀಚಿನ ದಿನಗಳಲ್ಲಿ ಜಮ್ಮು – ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದ್ದು, ದಾಳಿಯು ನಡೆಯುತ್ತಿದೆ, ಇದಕ್ಕೆ ಪಾಕ್ ಪ್ರಚೋದನೆಯೇ ಕಾರಣ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಭಾರತ –ಪಾಕಿಸ್ತಾನ ನಡುವೆ ಪಂದ್ಯ ನಡೆಯಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ. ಆದ್ದರಿಂದ ಪ್ರಕಾಶ್ ಪಡುಕೋಣೆಯವರು ಪಂದ್ಯಗಳು ನಡೆಯಲಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಮತ್ತು ಕ್ರೀಡೆಯನ್ನು ಜತೆಯಲ್ಲಿ ಬೆರೆಸಬಾರದು. ರಾಜಕೀಯ ಬೇರೆ, ಕ್ರೀಡೆ ಬೇರೆ. ಆದ್ದರಿಂದ ಉಭಯ ರಾಷ್ಟ್ರಗಳ ನಡುವೆ ಪಂದ್ಯಗಳು ನಡೆಯಲಿ, ಇದು ನನ್ನ ವ್ಯಯಕ್ತಿಕ ಅಭಿಪ್ರಾಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.