HEAVY RAIN-CM DIRECTIONS: ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ಸಂತ್ರಸ್ತರಿಗೆ ವಿಳಂಬ ಮಾಡದೇ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಕೆರೆಗಳು ಒಡೆಯದಂತೆ ಹಾಗೂ ಬಿರುಕು ಬೀಳದಂತೆ ಎಚ್ಚರಿಕೆ ವಹಿಸಬೇಕು. ಸಮೀಕ್ಷೆ ನಡೆಸಿ ಅಗತ್ಯವಿರುವ ಕಡೆ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ದೊಡ್ಡ ಕೆರೆಗಳಿರುವಲ್ಲಿ ಜಾಗೃತರಾಗಿದ್ದು, ಸಾವು ನೋವು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಮೈಸೂರು ಹೆದ್ದಾರಿಯಲ್ಲಿ ಮಳೆಯಿಂದಾಗಿ ನೀರು ನಿಂತಿರುವುದರಿಂದ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಇಂದಿನಿಂದಲೇ ಅನುವು ಮಾಡಿಕೊಡುವಂತೆ ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಕ್ಷಣವೇ ದುರಸ್ತಿ ಮಾಡಬೇಕು. ಅಧಿಕಾರಿಗಳು ಸಂವಹನದ ಮೂಲಕ ಕಾರ್ಯನಿರ್ವಹಿಸಬೇಕು ಎಂದರು.
ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಸ್ತೆ ದುರಸ್ತಿ ಕೈಗೊಳ್ಳಬೇಕು.

ಸಕಾಲದಲ್ಲಿ ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು ಎಂದು ಸೂಚಿಸಿದರು.
ಕಾಳಜಿ ಕೇಂದ್ರಗಳಲ್ಲಿರುವವರಿಗೆ ಗುಣಮಟ್ಟದ ಆಹಾರ ಹಾಗೂ ಬಂಧುಗಳ ಮನೆಗೆ ತೆರಲಿರುವವರಿಗೆ ಆಹಾರ ಕಿಟ್ ಗಳನ್ನು ತಲುಪಿಸುವಂತೆ ಸೂಚನೆ ನೀಡಿದರು.

ಸಚಿವರಾದ ಎಸ್.ಟಿ. ಸೋಮಶೇಖರ್, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಉಮೇಶ್ ಕತ್ತಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಗಿರುವ ಹಾನಿಯ ಕುರಿತು ವಿವರಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

More News

You cannot copy content of this page