ಚಿತ್ರದುರ್ಗ: ಫೋಕ್ಸೊ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರೋ ಡಾ.ಶಿವಮೂರ್ತಿ ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಚಿತ್ರದುರ್ಗ ಎಸ್ ಪಿ. ಕೆ. ಪರುಶುರಾಮ್ ಭೇಟಿ ನೀಡಿ ಪರಿಶೀಲನೆ ನಡಿಸಿದರು. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆಯಲ್ಲಿ ಮುರುಘಾ ಶರಣರ ಮೇಲೆ ಫೋಕ್ಸೊ ಪ್ರಕರಣ ದಾಖಲಾಗಿದೆ.
ಕೇಸ್ ದಾಖಲಾಗಿ 6 ದಿನಗಳ ಬಳಿಕ ನಿನ್ನೆ ರಾತ್ರಿ ಸುಮಾರು ಹತ್ತು ಗಂಟೆಗೆ ಶ್ರೀಗಳನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೋಮಲಾ ಅವರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿದ್ದರು.
ನಂಬರ್ 2216
ರಾತ್ರಿ ನ್ಯಾಯಾಧೀಶರ ಮುಂದೆ ಮುರುಘಾ ಶರಣರನ್ನು ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ವಿಚಾರಣಾಧೀನ ಖೈದಿ ನಂಬರ್ 2216 ಅನ್ನು ನೀಡಲಾಗಿದೆ. ಆದರೆ, ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ.
