Rahul Gandhi ; ಪ್ರಧಾನಿ ಮೋದಿ ಅವರ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ರಾಹುಲ್ ಗಾಂಧಿ

ಅಹಮದಾಬಾದ್.ಡಿ.28: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ತಮ್ಮ ತಾಯಿಯನ್ನು ಭೇಟಿ ಮಾಡಿದರು. ತಾಯಿಯ ಅನಾರೋಗ್ಯದ ವಿಷಯ ತಿಳಿದು ದೆಹಲಿಯಿಂದ ಅಹಮದಾಬಾದ್‌ಗೆ ಆಗಮನಿಸಿ, ತಾಯಿಯ ಆರೋಗ್ಯ ವಿಚಾರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಗುಜರಾತ್ ನ ಅಹಮದಾಬಾದ್​ನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.

“ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಅಮೂಲ್ಯವಾದದ್ದು. ಈ ಕಷ್ಟದ ಸಮಯದಲ್ಲಿ ಮೋದಿಜಿ, ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಮೋದಿ(100) ಅವರನ್ನು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

“ಪ್ರಧಾನಿ ಮೋದಿ ಅವರ ತಾಯಿ ಅಸ್ವಸ್ಥರಾಗಿದ್ದಾರೆ ಎಂಬ ಸುದ್ದಿ ನಮಗೆ ಬಂದಿದೆ. ಈ ಸಮಯದಲ್ಲಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಟ್ವೀಟ್ ಮಾಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಆರೋಗ್ಯವಾಗಿರಬೇಕು ಎಂದು ನಾವು ಬಯಸುತ್ತೇವೆ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

More News