ಇಸ್ಲಮಾಬಾದ್ : ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲುವಾಸ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮುಂದಿನ ಐದು ವರ್ಷಗಳ ಕಾಲ ಯಾವುದೇ ರೀತಿಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.
ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿದ್ದಾಗ ವಿದೇಶಿ ಗಣ್ಯರಿಂಜ ಸ್ವೀಕರಿಸಿದ ಉಡುಗೊರೆಗಳನ್ನು ಸರ್ಕಾರಿ ಅಧಿಕಾರಿಗಳಿಗೆ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಇಸ್ಲಮಾಬಾದ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ನ್ಯಾಯಾಲಯದ ಈ ಆದೇಶದ ಮೇರೆಗೆ ಇಮ್ರಾನ್ ಖಾನ್ ಅವರನ್ನು ಐದು ವರ್ಷ ಯಾವುದೇ ರೀತಿಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಚುನಾವಣಾ ಆಯೋಗ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ನಡುವೆ ನ್ಯಾಯಾಲಯದ ಈ ಕ್ರಮವನ್ನು ಪ್ರಶ್ನಿಸಿ ಇಮ್ರಾನ್ ಖಾನ್ ಇಸ್ಲಾಮಾಬಾದ್ ಹೈಕೋರ್ಟ್ ಮೊರೆ ಹೋಗಿದ್ದು, ಆ ವಿಚಾರಣೆ ಇಂದು ನಡೆಯಲಿದೆ.