ಬೆಂಗಳೂರು: ಸಂಕ್ರಾತಿ ಬಳಿಕ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದ್ದು, ಎನ್ ಡಿಎ ಮೈತ್ರಿ ಕೂಟದ ಭಾಗವಾಗಿರುವ ಜೆಡಿಎಸ್ ಗೂ ಒಂದು ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿದೆ.
ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಐದು ಸಚಿವ ಸ್ಥಾನಗಳು ಖಾಲಿ ಇವೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾದಲ್ಲಿ ಜೆಡಿಎಸ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲು ಪ್ರಧಾನಿ ಮೋದಿ ಆಸಕ್ತಿ ತೋರಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಧಾನಿ ಮೋದಿ ಸಂಕ್ರಾಂತಿ ಬಳಿಕ ಖಾಲಿ ಇರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಯಲ್ಲಿ ಕೇಂದ್ರ ಸಚಿವರು ಸ್ಪರ್ಧಿಸಿ ಗೆದ್ದ ಹಿನ್ನಲೆ ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇ, ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಾಧ್ಯತೆ ಹೆಚ್ಚಿದೆ.ಈ ವೇಳೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎನ್ನಲಾಗಿದೆ.ನರೇಂದ್ರ ಸಿಂಗ್ ತೋಮರ್ ಅವರಿಂದ ಖಾಲಿಯಾಗಿರುವ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಎಚ್ ಡಿ ಕುಮಾರಸ್ವಾಮಿಗೆ ಲಭಿಸಲಿದೆ ಎಂದು ಹೇಳಲಾಗಿದೆ.

ಈ ಹಿಂದೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅವಕಾಶ ನೀಡುವ ಪ್ರಸ್ತಾವನೆಯನ್ನು ಎಚ್ ಡಿ ಕುಮಾರಸ್ವಾಮಿ ತಿರಸ್ಕರಿಸಿದ್ದರು. ಆಗ ವಿರೋಧ ಪಕ್ಷದ ಸ್ಥಾನ ಬೇಡ ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.
ಮುಂಬರುವ ಲೋಕಸಭಾ ಚುನಾವಣೆ ವೇಳೆ ಎಚ್ ಡಿ ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಯೋಜನೆಯನ್ನು ಬಿಜೆಪಿ ಹಾಕಿಕೊಂಡಿದೆ.
ಒಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಮಹತ್ವದ ಸ್ಥಾನಮಾನಗಳನ್ನು ನೀಡುವ ಮೂಲಕ ಜನರ ಗಮನ ಸೆಳೆದು ಕಾಂಗ್ರೆಸ್ ಅನ್ನು ಮೂಲೆಗುಂಪು ಮಾಡಲು ಬಿಜೆಪಿ ಸನ್ನಿದ್ಧವಾಗಿದೆ. ಆದರೆ ಬಾಜಪ ಹಾಗು ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಕಾದುನೋಡಬೇಕಿದೆ.