ಭೋಪಾಲ್ : ಕರ್ನಾಟಕ ರಾಜ್ಯದಿಂದ ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ 100 ರೈತರನ್ನು ಮಧ್ಯಪ್ರದೇಶದ ಭೋಪಾಲ್ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಇಂದು ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಗೆ ತೆರಳುತ್ತಿದ್ದ ರೈತರನ್ನು ಕೆಳಗಿಳಿಸಿ ಬಂಧಿಸಿ, ಅವರನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಬೆಳಗ್ಗಿನ ಸುಮಾರು ನಾಲ್ಕು ಗಂಟೆ ವೇಳೆಗೆ ಕೈಲು ನಿಲ್ದಾಣದಲ್ಲಿ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಅಲ್ಲಿಯೇ ಪ್ರತಿಭಟಿಸಲಾಯಿತು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಶಾಂತಿಯುತ ಸಭೆ ನಡೆಯನ್ನು ಕೇಂದ್ರ ಸಚಿವರು ನಡೆಸುತ್ತಿದ್ದರೆ ಇನ್ನೊಂದೆಡೆ ರೈತರನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ ಎಂದು ರೈತ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಚರ್ಚೆ ಮೂಲಕ ಬಗೆಹರಿಸುವ ಪ್ರಯತ್ನ ಮಾಡಿರಲಿಲ್ಲ. ಈಗ ಏಕಾಏಕಿ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.