ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತರ ಕಾಂಗ್ರೆಸ್ ನಾಯಕರಿಗೆ ರಾಜ್ಯ ಹೈಕೋರ್ಟ್ ವಿಧಿಸಿದ್ದ ತಲಾ ಹತ್ತು ಸಾವಿರ ರೂಪಾಯಿ ದಂಡ ಹಾಗೂ ಖುದ್ದು ಹಾಜರಾತಿ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಮಾರ್ಚ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ ಮಿಶ್ರಾ ಅವರಿದ್ದ ವಿಭಾಗೀಯ ಪೀಠ ಕರ್ನಾಟಕ ಸರ್ಕಾರ ಮತ್ತು ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
2022 ಎಪ್ರಿಲ್ 14 ರಂದು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಸಾರ್ವಜನಿಕರಿಗೆ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸರು ದೂರು ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ರಾಜ್ಯ ಹೈಕೋರ್ಟ್ ತೀರ್ಪು ನೀಡಿದ್ದು, ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.