ನವದೆಹಲಿ : ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್ ನಡೆಸಲಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಈ ಕುರಿತು ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಅಂದಿನ ಸಚಿವ ಕೆ ಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಲಾಗಿತ್ತು. ಈ ತೀರ್ಪಿನ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂಬಿಪಾಟೀಲ್, ರಾಮಲಿಂಗಾರೆಡ್ಡಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ತಲಾ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದ್ದ ಹೈಕೋರ್ಟ್, ಎಲ್ಲಾರೂ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಫೆಬ್ರುವರಿ 6ರಂದು ತೀರ್ಪು ನೀಡಿತ್ತು.