ಬೆಂಗಳೂರು : ಇತ್ತೀಚೆಗೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಹೊಂದಿದ್ದ ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಸಂಜೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಮಾತುಕತೆ ನಡೆಸಿದರು.
ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಚರ್ಚೆ ಬಹುತೇಕ ಅಂತ್ಯಗೊಂಡಿದ್ದು, ಅವರು ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಅವರು ಜಾತಿ ಜನಗಣತಿ ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ವರದಿ ಇನ್ನೂ ಸಚಿವ ಸಂಪುಟದಲ್ಲಿ ಮಂಡನೆಯಾಗಬೇಕಾಗಿದೆ.