ಬೆಳಗಾವಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ನನ್ನ ಟಿಕೆಟ್ ತಪ್ಪಿಸಲು ಪಿತೂರಿ ನಡಿತಿದೆ, ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ, ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ರಹಸ್ಯ ಬಯಲು ಮಾಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾಗೆ ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ, ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ ಎಂದರು.
ಈ ಹಿಂದೆ ನಮ್ಮ ಪಕ್ಷದವರು ಯಾರು ವಿರೋಧ ಮಾಡುತ್ತಿಲ್ಲ ಎಂಬ ಉದ್ಧಟತನದ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ, ಅವರು ಇಂದು ತಮ್ಮ ವಿರುದ್ದ ವಿರೋಧವಿದೆ ಎಂದು ತಿಳಿಸಿದ್ದಾರೆ. ಇಂತಹ ದ್ವಂದ್ವ ಹೇಳಿಕೆಗಳೇ ಅವರಿಗೆ ಮುಳುವಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಕ್ಷೇತ್ರದ ಜನರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥಹ ವರದಿಯಿಂದ ಬಹಿರಂಗವಾಗಲಿದೆ, ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ, ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಆಶಾವಾದ ವ್ಯಕ್ತಪಡಿಸಿದರು.

ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ ಎಂದು ತಿಳಿಸಿದ ಅವರು, ಇದು ಎಲ್ಲರಿಗೂ ಅನ್ವಯ ಆಗುತ್ತದೆ, ಕೆಲಸ ಮಾಡಿದವರಿಗೆ ಅವಕಾಶ ಸಿಗುತ್ತದೆ ಎಂದರು. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ, ನಮ್ಮ ಶ್ರಮ, ನಮ್ಮ ಕೆಲಸ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ ಎಂದರು.
ಬಹಳಷ್ಟು ಹಾಲಿ ಸಂಸದರಿಗೆ ಟಿಕೇಟ್ ಮಿಸ್ ..!
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹಳಷ್ಟು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ, ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಟಿಕೆಟ್ ಕೇಳುವುದು ತಪ್ಪಲ್ಲ, ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ ಎಂದರು.

ಆದರೆ ಪ್ರಧಾನಿ ನರೇಂದ್ರ ಮೋದಿ ನಮ್ಮ ಕೇಂದ್ರ ಚುನಾವಣೆ ಮಂಡಳಿಯಿದೆ, ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ, ಇವೆಲ್ಲಾ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ, ಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ ಎಂದರು.
ಆದರೆ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬುದನ್ನು ಪ್ರಧಾನಿಯೂ ಹೇಳಿಲ್ಲ, ನಡ್ಡಾನೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ, ಈ ಎಲ್ಲ ಸುದ್ದಿಗಳು ಊಹಾಪೋಹ ಎನಿಸುತ್ತದೆ, ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರುತ್ತದೆ ಎಂದರು.
ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್, ಪೆಟ್ರೊಲ್ ಬೆಲೆ ಇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಲೆ ಇಳಿಕೆಗೇನು ಸಂಬಂಧವಿಲ್ಲ, ಗ್ಯಾಸ್, ಪೆಟ್ರೋಲ್ನಲ್ಲಿ ನಾವು ಸ್ವಾವಲಂಬಿ ಆಗಿಲ್ಲ, ಈ ವಿಚಾರದಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿ ಅವರು ಯೋಜನೆ ರೂಪಿಸುತ್ತಿದ್ದಾರೆ ಎಂದರು.