ಬೆಂಗಳೂರು : ಕೇವಲ ಎರಡು ಸೀಟಿಗಾಗಿ ಇಷ್ಟೊಂದು ಕಷ್ಟಪಡಬೇಕಾ ಎಂದು ಬಿಜೆಪಿಯೊಂದಿಗಿನ ಮೈತ್ರಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಮೈತ್ರಿಕೂಟದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 25 ಮತ್ತು ಜೆಡಿಎಸ್ ನ 3 ಅಭ್ಯರ್ಥಿಗಳ ಗೆಲುವಿಗೆ ಒಗ್ಗಟ್ಟಿನಿಂದ ಹೋರಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂದು ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ತುರ್ತು ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದಾರೆ.
ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ, ಮಂಡ್ಯ ಜೆಡಿಎಸ್ ಕಾರ್ಯಕರ್ತರಿಗೆ ನಿರಾಶೆಯಾಗದಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ವಿರುದ್ಧ ಗರಂ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಜೆಡಿಎಸ್ ಪಕ್ಷದ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ. ಮೈತ್ರಿ ಬಳಿಕ ಜೆಡಿಎಸ್ ಮುಗಿದು ಹೋಗಿದೆ ಎನ್ನುತ್ತಿದ್ದಾರೆ. ಆದರೆ, ಈ ಅನುಕಂಪ ನನಗೆ ಬೇಕಾಗಿಲ್ಲ ಎಂದು ಖಾರವಾಗಿ ಪ್ರತಿಕ್ರಯಿಸಿದರು.
ಜೆಡಿಎಸ್ ಮುಖಂಡರಿಗೆ ಆಮಿಷವೊಡ್ಡಿ ತನ್ನತ್ತ ಸೆಳೆಯುವ ಕೆಲಸವಾಗಿತ್ತು. ಇದನ್ನು ತಡೆಗಟ್ಟುವ ಉದ್ದೇಶದಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಿಮ್ಮಂತೆ ನಮ್ಮ ಕತ್ತನ್ನು ಬಿಜೆರಪಿ ಕೊಯ್ದಿಲ್ಲ ಎಂದರು.
ಬೆಂಗಳೂರು ಗ್ರಾಮಾಂತ್ರ ಕ್ಷೇತ್ರದಲ್ಲಿ ಕುಕ್ಕರ್, ಸೀರೆ ಹಂಚಿ ಚುನಾವಣೆ ಗೆಲ್ಲುವುದು ಯಾವ ಸೀಮೆ ಘನಂದಾರಿ ಕೆಲಸ, ಇದರಿಂದ ಸಂವಿಧಾನ ಉಳಿಯುತ್ತಾ ಎಂದು ಪ್ರಶ್ನಿಸಿದರು.