ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ನಿಗಾ ಇಡಲಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಹಾಗೂ ಎನ್ ಡಿ ಎ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಸ್ಪರ್ಧೆ ಮಾಡುತ್ತಿದ್ದಾರೆ. ರಾಜ್ಯದ ಗಮನ ಸೆಳೆದ ಈ ಕ್ಷೇತ್ರದಲ್ಲಿ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಟ್ಟು 2829 ಮತಗಟ್ಟೆಗಳಿವೆ. ಈ ಎಲ್ಲಾ ಮತಗಟ್ಟೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವೆಬ್ ಕಾಸ್ಟಿಂಗ್ ಮಾಡುವ ಮೂಲಕ ಚುನಾವಣಾ ಆಯೋಗ ನಿಗಾ ಇಡಲಿದೆ. ಅಲ್ಲದೆ 7 ಅರೆಸೇನಾ ಪಡೆ ತುಕಡಿಗಳನ್ನು ಇಲ್ಲಿ ನಿಯೋಜನೆ ಮಾಡಲಾಗಿದೆ.

ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಅಲ್ಲದೆ ಕೊಡಗು ಮೈಸೂರು ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ವೀಕ್ಷಕರು ನೀಡಿದ ವರದಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದರು.
ಹಾಸನ ಪೆನ್ ಡ್ರೈವ್ ವಿಚಾರವಾಗಿ ಕಾನೂನು ಪ್ರಕಾರ ಕ್ರಮ

ಹಾಸನದಲ್ಲಿ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಯೊಬ್ಬರು ದೂರು ನೀಡಿದ್ದಾರೆ. ಅದರಂತೆ ಐಟಿ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ. ಆದರೆ ಪೆನ್ ಡ್ರೈವನ್ನು ಯಾರು ಹಂಚಿಕೆ ಮಾಡ್ತಿದ್ದಾರೆ ಎಂಬ ಮಾಹಿತಿ ಇಲ್ಲ, ಅಭ್ಯರ್ಥಿ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು, ಸಂಬಂಧ ಪಟ್ಟವರಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಸ್ಪೆಷಲ್ ಮೆಡಿಕಲ್ ಕಿಟ್ ವ್ಯವಸ್ಥೆ

ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಓಟಿಂಗ್ ಕೌಂಟರ್ ಗಳಲ್ಲಿ ವಿಶೇಷ ಮೆಡಿಕಲ್ ಕಿಟ್ ವ್ಯವಸ್ಥೆ ಮಾಡಲಾಗಿದೆ. ಬಿಸಿಲಾಘಾತ ಆದರೆ ಸೂಕ್ತ ಚಿಕಿತ್ಸೆ ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೂ ಕ್ಲಸ್ಟರ್ ಗಳಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.