ಮೈಸೂರು: ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ರಾಜಕೀಯ ಮೈತ್ರಿ ಕುರಿತಂತೆ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಮೈತ್ರಿ ಮುಂದುವರಿಯಲಿದೆ ಎಂದು ಬಿಎಸ್‌ವೈ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಯಡಿಯೂರಪ್ಪ ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಬಿಜೆಪಿ 4 , ಜೆಡಿಎಸ್ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಬಿಜೆಪಿ ಸ್ಪರ್ಧಿಸಲಿರುವ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಬಿಎಸ್‌ವೈ ಪ್ರಕಟಿಸಿದ್ದಾರೆ.
ಇದೇ ವೇಳೆ ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿರುವ ಯಡಿಯೂರಪ್ಪ ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಪಕ್ಷಗಳಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ಲ ಎಂದು ಯಡಿಯೂರಪ್ಪ ಲೇವಡಿಮಾಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಮೈತ್ರಿಕೂಟ 24ರಿಂದ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೇಲೆ ಕರಿನೆರಳು ಬಿದ್ದಿತ್ತು. ಕುಮಾರಸ್ವಾಮಿ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಸುವ ಇಚ್ಚೆ ವ್ಯಕ್ತಪಡಿಸಿದ್ದರು. ಇದೀಗ ಯಡಿಯೂರಪ್ಪ ಕೂಡ ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.
ಬಿಜೆಪಿ- ಜೆಡಿಎಸ್ ಮೈತ್ರಿ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಗೆ ವಿಸ್ತರಣೆಯಾಗುವ ಸಾಧ್ಯತೆ ಇದೆ