PM Narendra Modi: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ರಾಮಕೃಷ್ಣ ಮಿಷನ್, ಇಸ್ಕಾನ್ ಸದ್ದು, ಮಮತಾ ವಿರುದ್ಧ ಮೋದಿ ವಾಗ್ದಾಳಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಲೋಕಸಭಾ ಕ್ಷೇತ್ರ ಗೆಲ್ಲಲ್ಲು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ಸ್ಪರ್ಧೆ ತಾರಕಕ್ಕೆ ಏರಿದೆ. ಈ ಮಧ್ಯೆ ಅನಿರೀಕ್ಷಿತವಾಗಿ ರಾಮಕೃಷ್ಣ ಮಿಷನ್, ಇಸ್ಕಾನ್ ಚುನಾವಣಾ ವಿಷಯವಾಗಿ ಪರಿವರ್ತನೆಗೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಸನ್ಯಾಸಿಗಳು ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಮುನ್ನಡೆಗೆ ತಡೆಯೊಡ್ಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಅಲ್ಪ ಸಂಖ್ಯಾತರ ಮತಗಳು ನಿರ್ಣಾಯಕವಾಗಿದೆ. ಇದೀಗ ಬಿಜೆಪಿ ಮತ್ತು ಟಿಎಂಸಿ ಈ ಹಿನ್ನೆಲೆಯಲ್ಲಿ ಆರೋಪ ಪ್ರತ್ಯಾರೋಪದಲ್ಲಿ ನಿರತವಾಗಿವೆ
ಮೋದಿ ತಿರುಗೇಟು
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಿಂದೂ ಸೇವಾ ಸಂಸ್ಥೆಗಳನ್ನು ಗುರಿಯಾಗಿರಿಸಿ ನಡೆಸಿದ ವಾಗ್ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಜನರ ಕಲ್ಯಾಣಕ್ಕೆ ಶ್ರಮಿಸುತ್ತಿರುವ ಸಂಘಟನೆಗಳ ವಿರುದ್ಧ ಆರೋಪ ಮಾಡಲಾಗಿದೆ. ಜನರ ಕಲ್ಯಾಣಕ್ಕೆ ಈ ಸಂಸ್ಥೆಗಳು ನಿಸ್ವಾರ್ಥ ಸೇವೆ ಮಾಡುತ್ತಿವೆ ಎಂದು ಹೇಳಿದ್ದಾರೆ.
ಸಂದೇಶ್‌ಖಾಲಿ ಬಳಿಕ ಹೊಸ ವಾಕ್ಸಮರ
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣ ಇತ್ತೀಚೆಗೆ ಭಾರಿ ಸದ್ದು ಮಾಡಿತ್ತು. ಹಿಂದೂ ಮಹಿಳೆಯರನ್ನು ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದವು. ಅಂತಿಮವಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತನನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಸಂದೇಶ್ ಖಾಲಿ ಪ್ರಕರಣದ ಪ್ರಮುಖ ಆರೋಪಿ ಜನರನ್ನು ಬೆದರಿಸಿ ಅವರ ಆಸ್ತಿ ಮುಟ್ಟುಗೋಲು ಹಾಕುತ್ತಿದ್ದ ಎಂದು ಕೂಡ ಆರೋಪಿಸಲಾಗಿತ್ತು.
ಇದೀಗ ಪಶ್ಚಿಮ ಬಂಗಾಳದಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ತೃಣಮೂಲ ಕಾಂಗ್ರೆಸ್ ವಿರುದ್ದ ಬಿಜೆಪಿ ಹೊಸ ಅಸ್ತ್ರ ಪ್ರಯೋಗಿಸಿದೆ. ಹಿಂದೂ ಮತಗಳ ಕ್ರೋಢಿಕರಣಕ್ಕೆ ಬಿಜೆಪಿ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸೇನಾಪಡೆಗಳ ನೆರವನ್ನು ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಬಳಸಲಾಗುತ್ತಿದೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ಖಾತರಿಪಡಿಸಲು ಹಲವು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಈಗಾಗಲೇ ರಾಜ್ಯದ ಹಲವೆಡೆ ತೃಣಮೂಲ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿದೆ
ನಾಳೆ 49 ಕ್ಷೇತ್ರಗಳಲ್ಲಿ ಮತದಾನ
ಲೋಕಸಭೆಯ 5ನೇ ಹಂತದ ಚುನಾವಣೆ ಸೋಮವಾರ ನಡೆಯಲಿದೆ. 6 ರಾಜ್ಯಗಳು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಿಸಿರುವ 49 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದೆ. ಇದರಲ್ಲಿ ಉತ್ತರಪ್ರದೇಶದ ಅಮೇಥಿ, ರಾಯಬರೇಲಿ ಕೂಡ ಸೇರಿದೆ. ರಾಯಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಕೇರಳದ ವಯನಾಡ್‌ನಿಂದಲೂ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ರಾಯಬರೇಲಿ ಕ್ಷೇತ್ರ ಗಾಂಧಿ ಕುಟುಂಬದ ಸಾಂಪ್ರದಾಯಿಕ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂದಿರಾಗಾಂಧಿ ಕೂಡ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇದೀಗ ರಾಹುಲ್ ಗಾಂಧಿ ರಾಯ್‌ಬರೇಲಿ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆ ನಡೆಸುತ್ತಿದ್ದಾರೆ. ಹಿಂದಿ ರಾಜ್ಯಗಳನ್ನು ಕಾಂಗ್ರೆಸ್ ನಿರ್ಲಕ್ಷಿಸಿಲ್ಲ ಎಂಬ ಸಂದೇಶ ರವಾನಿಸಲು ರಾಹುಲ್ ರಾಯ್‌ ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

More News

You cannot copy content of this page