ಬೆಂಗಳೂರು: ಹಿರಿಯ ಸಾಹಿತಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
“ಕಮಲಾ ಹಂಪನಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, ಅಧ್ಯಯನ ಮತ್ತು ಅಧ್ಯಾಪನ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ.
ನಾಡೋಜ ಪ್ರಶಸ್ತಿ ಪುರಸ್ಕೃತರಾದ ಕಮಲಾ ಅವರ ಅಗಲಿಕೆ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದರು. ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ.
2003 ರಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಕಟ್ಟಿದ್ದಾರೆ.
ನನ್ನ ಮೆಚ್ಚಿನ ಗುರುಗಳಾಗಿದ್ದ ಹಂಪಾ ನಾಗರಾಜಯ್ಯ ಅವರಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ಬರಲಿ. ಕಮಲ ಹಂಪನಾ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು, ಅಭಿಮಾನಿ ಬಳಗ ಹಾಗು ಸಾಹಿತ್ಯ ಆಸಕ್ತರಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.