ಬೆಂಗಳೂರು: ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ರಾಜ್ಯ ಸರ್ಕಾರ, ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನಾಗಿ ಘೋಷಿಸುವುದರ ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನ ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದರು.
ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸಳ್ಳೆ ಉತ್ಪತ್ತಿ ತಾಣಗಳನ್ನ ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂನಿನ ಅಸ್ತ್ರ ಬಳಸಬಹುದಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ ಎಂದರು.
ಡೆಂಗ್ಯೂ ಮಾರ್ಗಸೂಚಿಗಳನ್ನ ಪಾಲಿಸದಿದ್ದರೆ, ಗ್ರಾಮೀಣ ಪ್ರದೇಶದ ಮನೆಗಳಿಗೆ 200 ರೂ. ಹಾಗೂ ನಗರ ಪ್ರದೇಶಗಳಲ್ಲಿ 400 ರೂಪಾಯಿ ದಂಡ ವಿಧಿಸಲಾಗುವುದು. ಅಲ್ಲದೇ ಶಾಲಾ ಕಾಲೇಜು, ಹೊಟೆಲ್, ಲಾಡ್ಜ್, ರೆಸಾರ್ಟ್ ಗಳು ಸೇರಿದಂತೆ ವಾಣಿಜ್ಯ ಸಂಘ, ಸಂಸ್ಥೆಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ 500 ಹಾಗೂ ನಗರ ಪ್ರದೇಶಗಳಲ್ಲಿ 1000 ರೂ. ದಂಡ ನಿಗದಿಪಡಿಸಲಾಗಿದ್ದು, ಕಟ್ಟಡ ನಿರ್ಮಾಣ, ಹೊರಾಂಗಣ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ 1000 ರೂ. ಹಾಗೂ ನಗರ ಪ್ರದೇಶಗಳಲ್ಲಿ 2000 ರೂ. ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಗೆ ಅನುಕೂಲವಾಗುವಂತೆ ನೀರು ಸಂಗ್ರಹಣೆಯಾಗಬಾರದು. ಈ ನಿಟ್ಟಿನಲ್ಲಿ ಎಲ್ಲರು ಎಚ್ಚರಿಕೆ ವಹಿಸುವುದು ಮುಖ್ಯ. ದಂಡ ವಿಧಿಸುವುದಕ್ಕಿಂತ ಜನರು ಡೆಂಗ್ಯೂ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಈ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕೊವಿಡ್ ಅಕ್ರಮ ರಿಪೋರ್ಟ್ – ಸುಧಾಕರ್ ತಮ್ಮ ಮೇಲೆ ತಾವೇ ಆರೋಪ ಮಾಡಿಕೊಳ್ಳುತ್ತಿದ್ದಾರೆ
ಕೋವಿಡ್ ಅಕ್ರಮ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಕುನ್ನಾ ಅವರು ವರದಿಯನ್ನ ಮುಖ್ಯಮಂತ್ರಿಗಳಿಗೆ ನೀಡಿದ್ದು, ವರದಿಯಲ್ಲಿರುವ ಅಂಶಗಳನ್ನ ಆಧರಿಸಿ ಮುಂದಿನ ಕ್ರಮ ಆಗಲಿದೆ. ವರದಿಯಲ್ಲಿ ಏನಿದೆ ಎಂಬುದು ನಮಗೆ ತಿಳಿದಿಲ್ಲ. ಆದರೆ ಸುಧಾಕರ್ ಅವರು ಮಾತ್ರ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಬಹುಷಃ ಕೋವಿಡ್ ಸಂದರ್ಭದಲ್ಲಿ ಅವರು ಮಾಡಿರುವ ತಪ್ಪುಗಳ ಗಿಲ್ಟ್ ಸುಧಾಕರ್ ಅವರಿಗೆ ಕಾಡುತ್ತಿರಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾದ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ತಜ್ಞರ ಸಮಿತಿ ಕೊವಿಡ್ ಅಕ್ರಮದ ಬಗ್ಗೆ ವರದಿ ಸಲ್ಲಿಕೆ ಮಾಡಿದೆ. ವರದಿಯಲ್ಲಿ ಇಂಥವರ ಹೆಸರು ಇದೆ ಎಂದು ನಾವು ಹೇಳಿಲ್ಲ. ಸುಧಾಕರ್ ಅವರೇ ತಮ್ಮ ಬಗ್ಗೆ ತಾವು ಆರೋಪ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಬೀದಿಲಿ ನಿಂತಕೊಂಡು ಕೆಲಸ ಮಾಡಿದ್ದೇನೆ ಎಂದು ಸುಧಾಕರ್ ಹೇಳಿಕೊಳ್ಳುತ್ತಿದ್ದಾರೆ. ಅವರು ಏಲ್ಲಿ ನಿಂತು ಕೆಲಸ ಮಾಡಿದ್ದಾರೆ ನಾವು ನೋಡಿದ್ದೇವೆ. ಮಂತ್ರಿ ಮಾಡುವುದೇ ಕೆಲಸ ಮಾಡಲಿಕ್ಕೆ. ಹಾಗಿದ್ದಾಗ ಕೆಲಸ ಮಾಡುವುದು ಮಂತ್ರಿಗಳ ಕರ್ತವ್ಯ. ಅದನ್ನ ನಾವು ಹೇಳಿಕೊಳ್ಳುವುದಲ್ಲ. ಜನರು ನಮ್ಮ ಕೆಲಸದ ಬಗ್ಗೆ ಮಾತಾಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.