ಬೆಂಗಳೂರು: “ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನದ ಬಗ್ಗೆ ಕೇಳಿದಾಗ, “ಯಾರಲ್ಲೂ ಅಸಮಾಧಾನವಿಲ್ಲ. ಕೆಲವರು ಡಿ.ಕೆ. ಸುರೇಶ್ ಸ್ಪರ್ಧಿಸಬೇಕು ಎಂದು ಆಸೆಪಟ್ಟಿದ್ದರು. ಆದರೆ ಈಗ ಅಸಮಾಧಾನವಿಲ್ಲ. ಸುರೇಶ್ ಅವರೇ ಜವಾಬ್ದಾರಿ ವಹಿಸಿದ್ದು, ಅವರೇ ಅಭ್ಯರ್ಥಿಯನ್ನು ಮೊದಲು ಭೇಟಿ ಮಾಡಿದ್ದಾರೆ. ಪಕ್ಷದ ಹಿತದಿಂದ ನಾವು ಈ ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.
“ನಾನು ಹಾಗೂ ಮುಖ್ಯಮಂತ್ರಿ ಗಳು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುತ್ತೇವೆ. ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಇನ್ನು ಮಾಹಿತಿ ಬಂದಿಲ್ಲ. ಮಾಹಿತಿ ಬಂದ ತಕ್ಷಣ ನಾವು ಪ್ರಕಟಿಸುತ್ತೇವೆ. ಆಂತರಿಕ ಸಮೀಕ್ಷೆ ನಡೆಯುತ್ತಿದೆ. ಕೆಲವರ ಅಭಿಪ್ರಾಯ ಪಡೆಯಲಾಗುತ್ತಿದೆ. ರಾಜಕೀಯವಾಗಿ ನಮಗೆ ಲಾಭವಾಗುವ ಅಂಶಗಳನ್ನು ನೋಡುತ್ತಿದ್ದೇವೆ” ಎಂದು ತಿಳಿಸಿದರು.