ಶಿವಮೊಗ್ಗ : ಸಿದ್ದರಾಮಯ್ಯನವರು ಸ್ವಾಮೀಜಿಗಳ ವಸ್ತ್ರ ಹೋಲಿಕೆ ಮಾಡಿರುವುದು ಸರಿಯಲ್ಲ. ರಾಜಕೀಯ ತೆವಲು ತೀರಿಸಿಕೊಳ್ಳಲು ಅವರು ಇಂತಹ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಗಡುಗಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅವರು ಮಾಡಿದ ಅಕ್ಷಮ್ಯ ಅಪರಾಧ, ಸಿದ್ಧರಾಮಯ್ಯ ಅವರು ಕೂಡಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ನಡವಳಿಕೆ ಹಿಂದೂ ವಿರೋಧಿಯಾಗಿದ್ದು, ಸಾಧು ಸಂತರ ಕುರಿತು ನೀಡಿರುವ ಹೇಳಿಕೆಯನ್ನು ಅವರು ಖಂಡಿಸಿದರು. ಅವರು ಭಂಡರು, ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ, ಆದ್ದರಿಂದ ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಿ ಎಂದು ಆಗ್ರಹಿಸಿದರು.

ಈ ವಿಷಯದ ಕುರಿತು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರು ಬಾಯಿ ಬಿಡಬೇಕು, ಅವರ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ದೂರು ನೀಡಿ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.




