ಬೆಳಗಾವಿ : ಅಂಕೋಲಾ ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋಕಾ ನ್ಯಾಯಾಲಯ ತೀರ್ಪು ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ಎಲ್ಲಾ ಎಂಟು ಆರೋಪಿಗಳಿಗೆ ಶಿಕ್ಷೆ ಪ್ರಕಟಗೊಂಡಿದ್ದು, ಬೆಳಗಾವಿ ಕೋಕಾ ನ್ಯಾಯಾಧೀಶರಾದ ಸಿ.ಎಂ ಜೋಶಿ ಅವರು ತೀರ್ಪು ಪ್ರಕಟಿಸಿದ್ದಾರೆ.
ಈ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭೂಗತ ಪಾತಕಿ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ. ಹಾಗೂ ಇನ್ನಿತರ ಏಳು ಪಾತಕಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.
ಮೂರು ಕೋಟಿ ರೂಪಾಯಿ ಹಫ್ತಾ ನೀಡದಿದ್ದಕ್ಕೆ ಉದ್ಯಮಿ ಆರ್.ಎನ್.ನಾಯಕ್ ಅವರನ್ನು ಆರೋಪಿಗಳು ಹತ್ಯೆ ಮಾಡಿದ್ದರು. ಸುಪಾರಿ ನೀಡಿ ಹತ್ಯೆ ಮಾಡಿಸಿದ ಆರೋಪ ಸಾಭೀತಾಗಿತ್ತು. ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್‌ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.
ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು, ಬನ್ನಂಜೆ ರಾಜಾ ಪರ ವಾದ ಮಂಡಿಸಿದ್ದ ವಕೀಲ ಎಂ.ಶಾಂತಾರಾಮ ಶೆಟ್ಟಿ, 2013 ಡಿಸೆಂಬರ್ 21ರಂದು ಉದ್ಯಮಿ ಆರ್.ಎನ್.ನಾಯಕ್ ಹತ್ಯೆಯಾಗಿತ್ತು.




