BAN PILLION RIDING: ಕೋಮುಗಲಭೆ : ಒಂದು ವಾರ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿಗೆ ನಿರ್ಬಂಧ: ADGP ಅಲೋಕ್ ಕುಮಾರ್

ಮಂಗಳೂರು: ಸರಣಿ ಹತ್ಯೆಯ ನಂತರ ಆತಂಕದಲ್ಲಿದ್ದ ಮಂಗಳೂರು ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ರಾತ್ರಿ ಸಂಚಾರದ ನಿರ್ಬಂಧವನ್ನು ಹಂತ ಹಂತವಾಗಿ ಸಡಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಅದರ ನಡುವೆಯೇ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿಗೆ ನಿರ್ಬಂಧ ವಿಧಿಸಲು ಅಧಿಕಾರಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಜಾರಿಯಲ್ಲಿರುವ ನಿರ್ಬಂಧಗಳು ಇನ್ನೂ ಕೆಲವು ದಿನಗಳ ಕಾಲ ಮುಂದುವರೆಸಲಾಗುವುದು ಎಂದು ತಿಳಿಸಿದ ಅವರು, ವಿಧಿಸಲಾಗಿದ್ದ ನಿರ್ಬಂಧಗಳಿಗೆ ವಿನಾಯಿತಿ ನೀಡಿದ ಬಳಿಕ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಕ್ಕೆ ನಿರ್ಬಂಧ ವಿಧಿಸಲಾಗುವುದು ಎಂದು ಸ್ಪಷ್ಟಪಡಿಸಿದರಲ್ಲದೆ, ಹಿರಿಯ ನಾಗರೀಕರು ಮತ್ತು ಹದಿನೆಂಟು ವರ್ಷ ವಯಸ್ಸಿನ ಮಕ್ಕಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು.
ಮಂಗಳೂರು ನಗರದಲ್ಲಿರುವ ಎಲ್ಲಾ ರೀತಿಯ ಕಿಡಿಗೇಡಿಗಳ ಮೇಲೆ ನಿಗಾವಹಿಸಲಾಗಿದೆ, ಜಿಲ್ಲೆಯಲ್ಲಿ ಸದ್ಯ ಶಾಂತ ಪರಿಸ್ಥಿತಿ ಇದೆ. ಪ್ರತಿಯೊಬ್ಬರು ಧೈರ್ಯವಾಗಿ ಶಾಂತಿಯಿಂದ ಓಡಾಡುತ್ತಿದ್ದಾರೆ ಎಂದು ತಿಳಿಸಿದ ಎಡಿಜಿಪಿ, ಅಪರಾಧಿಗಳನ್ನು ಅಪರಾಧಿಗಳ ರೀತಿಯಲ್ಲಿ ಅವರನ್ನು ಉಪಚರಿಸಬೇಕೆಂದು ಸೂಚಿಸಲಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 12 ಚೆಕ್ ಪೋಸ್ಟ್, ಮಂಗಳೂರು ನಗರ ವ್ಯಾಪ್ತಿಯಲ್ಲಿ 6 ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಇವು ಕನಿಷ್ಠ ಒಂದು ವರ್ಷದವರೆಗೆ ಮುಂದವರೆಯಲಿವೆ, ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕ ತೆಗೆಯುವುದರ ಬಗ್ಗೆ ಯೋಚಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದರು.

More News