ಬೆಂಗಳೂರು : ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಪಿಎಸ್ಐ ನೇಮಕಾತಿ ಸಂಬಂಧ ಸರ್ಕಾರ ಹೊರಡಿಸಿದ್ದ ಮರು ಪರೀಕ್ಷೆಯ ಆದೇಶವನ್ನು ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ನ್ಯಾಯಾಲಯದ ಮುಂದಿನ ಆದೇಶದವರೆಗೂ ಯಾವುದೇ ದಿನಾಂಕ ಪ್ರಕಟಿಸಲು ಮುಂದಾಗಬಾರದು ಎಂದು ಮಧ್ಯಂತರ ಆದೇಶ ಪ್ರಕಟಿಸಿದೆ.
ಪಿಎಸ್‌ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಎಪ್ರಿಲ್ 29, 2022 ರಲ್ಲಿಯೇ ಆದೇಶ ನೀಡಲಾಗಿತ್ತು. ಈ ಹಿಂದೆ ನಡೆದ ಪರೀಕ್ಷೆಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಅಲ್ಲದೆ, ನ್ಯಾಯಾಲಯವು ಮುಂದಿನ ಆದೇಶದವರೆಗೂ ಮರು ಪರೀಕ್ಷೆ ಮಾಡಲು ಮುಂದಾಗುವಂತಿಲ್ಲ ಎಂದು ಹೇಳಿದೆ.

ಈ ಸಂದರ್ಭದಲ್ಲಿ ಅರ್ಹ ಅಭ್ಯರ್ಥಿಗಳ ಪರವಾಗಿ ವಾದ ಮಂಡಿಸಿದ ವಕೀಲರು, ಅಕ್ರಮಕ್ಕೆ ಸಂಬಂಧಿಸಿದಂತೆ ತಬಿಖೆ ನಡೆದಿದೆ. ಈ ಸಂಬಂಧ 32 ಅಭ್ಯರ್ಥಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ದಾಖಲಿಸಲಾಗಿದೆ. ಹಾಗಾಗಿ, ಕಳಂಕಿತ ಮತ್ತು ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಅವಕಾಶವಿದೆ. ಇದರಿಂದ ಮರು ಪರೀಕ್ಷೆ ನಡೆಸುವ ಅವಶ್ಯಕತೆ ಇಲ್ಲ ಎಂದು ವಾದಿಸಿದರು.
ಹೆಚ್ಷುವರಿ ಅಕ್ವೋಕೇಟ್ ಜನರಲ್ ಆರ್. ಸುಬ್ರಹ್ಮಣ್ಯ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿ, ಪ್ರಕರಣದಲ್ಲಿ ಹಲವು ಅಧಿಕಾರಿಗಳು, ಅಭ್ಯರ್ಥಿಗಳು ಹಾಗೂ ಮಧ್ಯವರ್ತಿಗಳು ಭಾಗಿಯಾಗಿದ್ದಾರೆ. ಲಿಖಿತ ಪರೀಕ್ಷೆಯಲ್ಲೇ ಅಕ್ರಮವಾಗಿದೆ. ಅದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿದರು. ಆದರೆ, ನ್ಯಾಯಾಲಯವು ಅರ್ಜಿದಾರರ ಪರ ವಾದಕ್ಕೆ ಮಾನ್ಯನೀಡಿ ಹೊಸ ಪರೀಕ್ಷೆ ಬೇಡ ಎಂಬ ಆದೇಶ ನೀಡಿ, ಮಧ್ಯಂತರ ತೀರ್ಪು ಪ್ರಕಟಿಸಿತು.




