ನನ್ನ ಮೇಲಿನ ದಾಳಿಯಲ್ಲಿ ಪಾಕ್ ಸೇನೆಯ ಉನ್ನತ ಅಧಿಕಾರಿಯ ಕೈವಾಡವಿದೆ ಎಂದು ಆರೋಪಿಸಿರುವ ಇಮ್ರಾನ್ ಖಾನ್ ವಿರುದ್ಧ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಾಕಿಸ್ತಾನ ಸೇನೆ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರವನ್ನು ಆಗ್ರಹಿಸಿದೆ.
ಪಾಕಿಸ್ತಾನದ ವಜೀರಾಬಾದ್‌ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ, ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವು ಜಾಗತಿಕವಾಗಿ ಗಮನ ಸೆಳೆದಿದೆ. ಈ ಕುರಿತು ಭಾರತದ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಇಮ್ರಾನ್ ಖಾನ್ ಮೇಲಿನ ದಾಳಿಗೆ ಸಂಬಂಧಿಸಿದ ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿರುವುದಾಗಿ ಸ್ಪಷ್ಟಪಡಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಭಾರತದ ವಿದೇಶಾಂಗ ವ್ಯವಹಾರ ಇಲಾಖೆ ವಕ್ತಾರ ಅರಿಂದಮ್ ಬಾಗ್ಚಿ, “ಪಾಕಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ..” ಇದು ಪಾಕ್‌ನ ಆಂತರಿಕ ವಿಚಾರವಾದರೂ, ಕೇಂದ್ರ ಸರ್ಕಾರ ಮತ್ತು ವಿದೇಶಾಂಗ ಇಲಾಖೆಯು ಪಾಕಿಸ್ತಾನದ ಬೆಳವಣಿಗೆಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ ಎಂದು ಬಾಗ್ಚಿ ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನದ ಪೂರ್ವ ನಗರವಾದ ವಜೀರಾಬಾದ್‌ನಲ್ಲಿ, ಇಮ್ರಾನ್ ಖಾನ್ ಅವರ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಈ ವೇಳೆ ಅಪರಿಚಿತ ಬಂದೂಕುಧಾರಿ, ಕಂಟೈನರ್-ಮೌಂಟೆಡ್-ಟ್ರಕ್ ಮೇಲೆ ನಿಂತಿದ್ದ ಇಮ್ರಾನ್ ಖಾನ್ ಅವರ ಮೇಲೆ ಗುಂಡು ಹಾರಿಸಿದ್ದ. ಇಮ್ರಾನ್ ಖಾನ್ ಅವರಿಗೆ ಒಟ್ಟು 4 ಗುಂಡುಗಳು ತಗುಲಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಂಜಾಬ್ ಪ್ರಾಂತ್ಯದ ಅಲ್ಲಾವಾಲಾ ಚೌಕ್‌ನಲ್ಲಿ ಈ ಘಟನೆ ನಡೆದಿತ್ತು.




