ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ T20 ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯದಲ್ಲಿ ನೀಡಿದ ಪ್ರದರ್ಶನದ ಬಳಿಕ ಭಾರತ ಟಿ20 ತಂಡದಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆ ಹೆಚ್ಚಾಗಿರುವ ಬೆನ್ನಲ್ಲೇ ಬಿಸಿಸಿಐ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನದಿಂದ ಚೇತನ್ ಶರ್ಮಾ ಅವರನ್ನು ವಜಾಗೊಳಿಸಲಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಹೀನಾಯ ಸೋಲನುಭವಿಸುವ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು. ಈ ನಡುವೆ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹಾಗೂ ತಂಡದ ಆಟಗಾರರ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭಗೊಂಡಿದ್ದವು. ಇದರ ಬೆನ್ನಲ್ಲೇ ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ನ್ಯೂಜಿ಼ಲೆಂಡ್ ಪ್ರವಾಸದಿಂದ ವಿಶ್ರಾಂತಿ ನೀಡಿ ವಿವಿಎಸ್ ಲಕ್ಷ್ಮಣ್ ಅವರಿಗೆ ಆ ಜವಾಬ್ದಾರಿ ನೀಡಲಾಗಿದೆ. ಮತ್ತೊಂದೆಡೆ ಭಾರತ ಟಿ20 ತಂಡದಲ್ಲಿ ಯುವ ಆಟಗಾರರಿಗೆ ಆದ್ಯತೆ ನೀಡಬೇಕು ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಟಿ20 ತಂಡದ ನಾಯಕನನ್ನಾಗಿ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಈ ಬೆಳವಣಿಗೆಗಳ ನಡುವೆಯೇ ಭಾರತ ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನದಿಂದ ಚೇತನ್ ಶರ್ಮಾ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಚೇತನ್ ಶರ್ಮಾ ಅವರನ್ನು ವಜಾಗೊಳಿಸಿದ ಸ್ಥಾನಕ್ಕೆ ನಂತರ ಬಿಸಿಸಿಐ ಟ್ವಿಟರ್‌ನಲ್ಲಿ ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಭಾರತ ಹಿರಿಯ ಪುರುಷರ ತಂಡಕ್ಕೆ ರಾಷ್ಟ್ರೀಯ ಆಯ್ಕೆಗಾರರ ಸ್ಥಾನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪ್ರಕಟಿಸಿದೆ.
ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 28ರ ಸಂಜೆ 6 ಗಂಟೆಗೆ ಕೊನೆಯ ದಿನಾಂಕ ಮತ್ತು ಸಮಯ ಎಂದು ತಿಳಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಲವು ಮಾನದಂಡಗಳನ್ನು ಪೂರೈಸಬೇಕು ಎಂದು ಬಿಸಿಸಿಐ ತಿಳಿಸಿದೆ. ಅಭ್ಯರ್ಥಿಗಳು ಕನಿಷ್ಠ ಏಳು ಟೆಸ್ಟ್ ಪಂದ್ಯಗಳು, 30 ಪ್ರಥಮ ದರ್ಜೆ ಪಂದ್ಯಗಳು ಅಥವಾ 10 ODI ಮತ್ತು 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು. ಅಭ್ಯರ್ಥಿಗಳು ಕನಿಷ್ಠ ಐದು ವರ್ಷಗಳ ಹಿಂದೆ ಆಟದಿಂದ ನಿವೃತ್ತರಾಗಿರಬೇಕು.




