ಬೆಂಗಳೂರು:ಫೆ.21: ಏಳನೇ ವೇತನ ಆಯೋಗ ಜಾರಿಗಾಗಿ ಒತ್ತಾಯಿಸಿ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರು ಆಗಲು ರಾಜ್ಯ ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘದಿಂದ ನಡೆದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 1 ರೊಳಗೆ ಬೇಡಿಕೆ ಈಡೇರಿಸದಿದ್ದರೇ ಮಾರ್ಚ್ 1ರಂದು ಎಲ್ಲಾ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರು ಆಗುವ ಎಚ್ಚರಿಕೆ ನೀಡಿದ್ದಾರೆ. ಏಳನೇ ವೇತನ ಆಯೋಗದ ಮದ್ಯಂತರ ವರದಿ ಪಡೆದು 40% ಫಿಟ್ಮೆಂಟ್ ನ್ನು ದಿನಾಂಕ 1.07.2022 ರಿಂದ ಜಾರಿಗೆ ತರಬೇಕೆಂದು ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.

ಹಾಗೆಯೇ ರಾಜಸ್ತಾನ, ಛತ್ತೀಸಗಡ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂದು ಸಂಘ ಒತ್ತಾಯಿಸಿದೆ.
ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಏಳು ದಿನಗಳ ನೋಟಿಸ್ ನೀಡಿ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದ ಸರ್ಕಾರಿ ನೌಕರರ ಸಂಘ ದಿನಾಂಕ:01.03.2023 ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳು ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಅನಿರ್ದಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವುದರ ಮೂಲಕ ಮುಷ್ಕರ ಮಾಡಲಾಗುವುದು ಎಂದು ತಿಳಿಸಿದೆ.




