ಮೈಸೂರಿನ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ

ಮೈಸೂರು: ಮೈಸೂರಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭಾರತೀಯ ಜನತಾ ಪಕ್ಷ ಮೇಯರ್ ಹುದ್ದೆಯನ್ನು ಅಲಂಕರಿಸಿದೆ. ಪಾಲಿಕೆಯ ಸುಮಾರು 38 ವರ್ಷಗಳ ಇತಿಹಾಸದಲ್ಲೇ ಬಿಜೆಪಿ ಅಧಿಕಾರದ ಗದ್ದುಗೆ ಏರಿರಲಿಲ್ಲ. ಈ ಬಾರಿ ಅದು ಸಾಕಾರಗೊಂಡಿದೆ. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರ ತಂತ್ರಗಾರಿಕೆ ಕೊನೆಗೂ ಫಲಿಸಿದೆ.

ಮೇಯರ್ ಆಗಿ ಆಯ್ಕೆಯಾಗಿರುವ ಬಿಜೆಪಿಯ ಸುನಂದ ಪಾಲನೇತ್ರಾ ಅವರು 26 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ 22 ಮತಗಳು ಚಲಾವಣೆಯಾಗಿದ್ದವು.

ಕಳೆದ ಒಂದು ತಿಂಗಳಿಂದ ನಡೆಯುತ್ತಿದ್ದ ರಾಜಕೀಯ ಹಗ್ಗಜಗ್ಗಾಟದಲ್ಲಿ, ಕೊನೆಗೂ ಮೇಯರ್ ಹುದ್ದೆ ಪಡೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಪಿಯ ಸುನಂದಾ ಪಾಲನೇತ್ರ ಅವರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.  ಕೊನೆ ಘಳಿಗೆವರೆಗೂ ಸಾಂಸ್ಕೃತಿಕ ನಗರಿ ಮೈಸೂರಿನ ಮೇಯರ್ ಪಟ್ಟ ಯಾರಿಗೆ ಒಲಿಯಲಿದೆ ಎನ್ನುವುದು ಕುತೂಹಲಕಾರಿಯಾಗಿತ್ತು. ಇಂದು ಬೆಳಗ್ಗಿನಿಂದ ನಡೆದ ಹಗ್ಗ ಜಗ್ಗಾಟದಲ್ಲಿ ಬಿಜೆಪಿ ಮೇಯರ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.

ಪಾಲಿಕೆಯ 38 ವರ್ಷದ ಇತಿಹಾದಲ್ಲೇ ಪ್ರಥಮ

160ಕ್ಕೂ ಹೆಚ್ಚು ವರ್ಷದ ಇತಿಹಾಸ ಹೊಂದಿರುವ ಮೈಸೂರು ಪೌರ ಸಂಸ್ಥೆಯು 1983ರಲ್ಲಿ ಮಹಾನಗರ ಪಾಲಿಕೆಯಾಗಿ ಹೊರಹೊಮ್ಮಿತು. ಅಲ್ಲಿಂದ ಸುಮಾರು  38 ವರ್ಷದ ಅವಧಿಯಲ್ಲಿ ಬಿಜೆಪಿ ಒಂದು ಬಾರಿಯೂ ಮೇಯರ್ ಪಟ್ಟವನ್ನು ಅಲಂಕರಿಸಿರಲಿಲ್ಲ. ಈ ಬಾರಿ ಮೇಯರ್ ಪಟ್ಟ ಒಲಿದಿದೆ. ಇದರ ಯಶಸ್ಸು  ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರಿಗೆ ಸಲ್ಲುತ್ತದೆ ಎಂದು ಸ್ಥಳೀಯ ಬಿಜೆಪಿ ಘಟಕ ತಿಳಿಸಿದೆ.

ಅಭಿನಂದನೆ ಸಲ್ಲಿಸಿದ ಮಾಜಿ ಮುಖ್ಯಮಂತ್ರಿಗಳು

ಕಳೆದ 1 ವರ್ಷದಿಂದ ಅತ್ಯಂತ ಚುರುಕಿನಿಂದ ಮತ್ತು ಸರ್ಕಾರದ ಜನಪ್ರಿಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಯಶಸ್ಸನ್ನು ಈಗಾಗಲೇ ಸಾಧಿಸಿದ್ದೀರಿ. ಇದೀಗ ಮೈಸೂರಿನ ಮಹಾಪೌರರು ಹಾಗೂ ಉಪ ಮಹಾಪೌರರನ್ನು ಆಯ್ಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಕ್ಕೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಸೋಮಶೇಖರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂರಿಂದ ಶ್ಲಾಘನೆ

ಪಾಲಿಕೆಯ 38 ವರ್ಷಗಳ ಇತಿಹಾಸದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಮೇಯರ್ ಪಟ್ಟವನ್ನು ಹೊಂದಿದೆ. ಇದಕ್ಕೆ ಸಹಕಾರ ಸಚಿವರಾಗಿರುವ ಎಸ್.ಟಿ.ಸೋಮಶೇಖರ್ ಅವರ ಪಾತ್ರ ಬಹಳ ದೊಡ್ಡದಿದೆ. ಪಕ್ಷಕ್ಕಾಗಿ ಅವರ ದುಡಿಮೆ, ಶ್ರಮ ನಿಜಕ್ಕೂ ಸಾರ್ಥಕವಾಗಿದೆ. ಈ ಅವಕಾಶವನ್ನು ಪಕ್ಷ ಸದುಪಯೋಗಪಡಿಸಿಕೊಂಡು ಮೈಸೂರಿನಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ಮಾಡಿ ತೋರಿಸಲಿ ಎಂದು ಹಾರೈಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ಲಾಘಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ , ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ ಸೇರಿದಂತೆ ಅನೇಕ ಮುಖಂಡರು ಸಚಿವ ಸೋಮಶೇಖರ್ ಅವರಿಗೆ ಅಭಿನಂದಿನೆ ಸಲ್ಲಿಸಿದ್ದಾರೆ.

More News

You cannot copy content of this page