ಧಾರವಾಡ : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಜಾಗೊಳಿಸಿದೆ.
ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಹೋಗಲು ಅವಕಾಶ ಕೋರಿ ವಿನಯ್ ಕುಲಕರ್ಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಯೋಗೇಶ್ ಗೌಡ ಕೊಲೆ ಪ್ರಕರಣದ 90 ಸಾಕ್ಷಿಗಳು ಧಾರವಾಡ ಜಿಲ್ಲೆಯಲ್ಲೇ ಇದ್ದಾರೆ ಎಂದು ತನಿಖಾಧಿಕಾರಿಗಳು ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಈ ಹಿಂದೆ ಧಾರವಾಡ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಕೂಡ ನಿರಾಕರಿಸಿತ್ತು ಎಂದು ಮನವರಿಕೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅನುಮತಿಯನ್ನು ನಿರಾಕರಿಸಿದ್ದಾರೆ.
2016ರ ಜೂನ್ ನಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಹತ್ಯೆಯಾಗಿತ್ತು. ನವೆಂಬರ್ 2020 ರಲ್ಲಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ಧಪಡಿಸುವುದಾಗಿ ಕೋರ್ಟ್ ಎಚ್ಚರಿಕೆ ಕೂಡ ನೀಡಿತ್ತು.
ವಿಧಾನಸಭೆ ಹಿನ್ನೆಲೆಯಲ್ಲಿ ಅವರು ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಅಲ್ಲಿಗೆ ತೆರಳಲು ಅವರು ಬಯಸಿದ್ದರು.




