ಬಿಎಸ್ ವೈ ಆಪ್ತನ ಮನೆ ಮೇಲೆ ರಾಜಕೀಯ ಪ್ರೇರಿತ ಐಟಿ ದಾಳಿ : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ ಆಪ್ತರನ್ನೇ ಸೆಲೆಕ್ಟ್ ಮಾಡಿಕೊಂಡು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿರೋದರಲ್ಲಿ ರಾಜಕೀಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅನುಮಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ರಾಜಕೀಯ ವಾಸನೆ ಬರುತ್ತಿದ್ದು, ಶೀಘ್ರದಲ್ಲೇ ಅದು ಬಹಿರಂಗವಾಗಲಿದೆ ಎಂದು ತಿಳಿಸಿದರು.

ಉಪಚುನಾವಣೆ ನಡೆಯುತ್ತಿರುವ ಎರಡೂವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಅಭಿಪ್ರಾಯಪಟ್ಟ ಅವರು, ಉಪಚುನಾವಣೆ ಫಲಿತಾಂಶ ಭವಿಷ್ಯದ ದಿಕ್ಸೂಚಿಯಲ್ಲ ಎಂದು ಅಭಿಪ್ರಾಯಪಟ್ಟರು. ಆದರೆ ಈ ಫಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ತಿಳಿಯುತ್ತದೆ ಎಂದುಸ್ಪಷ್ಟಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯಿಂದ ಜನತೆ ಬೇಸತ್ತಿದ್ದಾರೆ, ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ ಎಂದು ತಿಳಿಸಿದರು. ಜೆಡಿಎಸ್ ನವರು ಒಳ್ಳೆಯ ಉದ್ದೇಶದಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ, ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶವಾಗಿದೆ ಎಂದರಲ್ಲದೆ, ಆದರೆ ಜನ ಬುದ್ದಿವಂತರಿದ್ದಾರೆ, ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಕೇವಲ ಊಹಾಪೋಹ, ಈ ಸಂಬಂಧ ಚರ್ಚಿಸಲು ಸೋನಿಯಾ ಗಾಂಧಿಯವರೂ ನನ್ನನ್ನು ಕರೆದಿರಲಿಲ್ಲ, ಆ ಬಗ್ಗೆ ಚರ್ಚೆಯೂ ಆಗಿಲ್ಲ ಎಂದು ಮತ್ತೊಮ್ಮೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಾನು ಎಂದೂ ಆ ಯೋಚನೆನೂ ಮಾಡಿಯೂ ಇಲ್ಲ ಎಂದು ತಿಳಿಸಿದ ಅವರು, ಆ ಬಗ್ಗೆ ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ತಿಳಿಸಿದರು.

More News