CASH FOR POSTING: ಕ್ಯಾಷ್ ಫಾರ್ ಪೋಸ್ಟಿಂಗ್ ಹ್ಯಾಷ್ ಟ್ಯಾಗ್ ಬಳಸಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಟೀಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿಯೇ ವರ್ಗಾವರ್ಗಿ ದಂಧೆಗೆ ಹುಂಡಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಕಾಸಿಗಾಗಿ ಪೋಸ್ಟಿಂಗ್ ದಂಧೆ ಶುರುವಾಗಿದ್ದು, ಕರ್ನಾಟಕದ ಭ್ರಷ್ಟಾಚಾರವೋ ಎಂದು ಪ್ರಶ್ನಿಸಿದ್ದಾರೆ.
ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿರುವ ಹೆಚ್ ಡಿ ಕುಮಾರಸ್ವಾಮಿ, ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಅವರು ಮಾಡಿರುವ ಟ್ವೀಟ್ ಸಂಪೂರ್ಣ ವಿವರ ಇಲ್ಲಿದ್ದು, ಕ್ಯಾಷ್ ಫಾರ್ ಪೋಸ್ಟಿಂಗ್ ಎಂಬ ಹ್ಯಾಸ್ ಟ್ಯಾಗ್ ಬಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಗ್ಯಾರಂಟಿಗಳ @INCKarnataka ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ.
ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ??

4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.
ಈ @INCKarnataka ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ.

More News