Anna Bhagya Yojana Launch: ಅನ್ನಭಾಗ್ಯ ಯೋಜನೆ ಜಾರಿ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸಂದೇಶ ರವಾನೆಯಾಗುತ್ತಿದೆ- ಡಿಕೆ ಶಿವಕುಮಾರ್

ಬೆಂಗಳೂರು: ಇಂದು ಅನ್ನ ಭಾಗ್ಯ ಭರವಸೆ ಜಾರಿ ಕಾರ್ಯಕ್ರಮದ ಮೂಲಕ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸಂದೇಶ ರವಾನೆಯಾಗುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ದಿನವೇ ಬಸವ ಜಯಂತಿಯಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದನ್ನು ಈ ದಿನ ಸ್ಮರಿಸುತ್ತೇನೆ. ನಂತರ ನಮ್ಮ ಸರ್ಕಾರ ಆ ಯೋಜನೆಯಲ್ಲಿ ಅಕ್ಕಿಯ ಪ್ರಮಾಣವನ್ನು 7 ಕೆ.ಜಿಗೆ ಹೆಚ್ಚಳ ಮಾಡಿತ್ತು. ನಂತರದ ಸರ್ಕಾರ ಅದನ್ನು 5 ಕೆ.ಜಿಗೆ ಇಳಿಸಿತ್ತು. ನಂತರ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ನೀಡುವುದಾಗಿ ನಮ್ಮ ಐದು ಗ್ಯಾರಂಟಿ ಯೋಜನೆಗಳಲ್ಲಿ ಸೇರಿಸಿದ್ದೆವು. ನಮ್ಮ ಈ ಯೋಜನೆಗಳ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಅದರ ಜತೆಗೆ ರಾಜಕೀಯ ಕೂಡ ನಡೆಯುತ್ತಿದೆ. ಈ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ನೀಡಿ ಕೇಂದ್ರ ಸರ್ಕಾರ ತನ್ನ ಹೃದಯ ಶ್ರೀಮಂತಿಕೆ ಮೆರೆಯಬಹುದಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ ಎಂದರು

ಈ ಸಂದರ್ಭದಲ್ಲಿ ಬಿಜೆಪಿ ಸ್ನೇಹಿತರಿಗೆ ಒಂದು ಮಾತು ಹೇಳಬಯಸುತ್ತೇನೆ. ಆಹಾರ ಭದ್ರತೆ ಕಾಯ್ದೆ ತಂದವರು ಯಾರು? ಏಕೆ ತಂದರು ಎಂದು ಅರಿಯಬೇಕು. ದೇಶವನ್ನು ಹಸಿವುಮುಕ್ತ ಮಾಡುವ ಉದ್ದೇಶದಿಂದ ಯುಪಿಎ ಸರ್ಕಾರ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ಬಡ ಜನರಿಗೆ ಆಹಾರ ಧಾನ್ಯ ನೀಡುವುದನ್ನು ಸಂವಿಧಾನದ ಹಕ್ಕಾಗಿ ತಂದಿದ್ದನ್ನು ನೆನಪಿಸಿಕೊಳ್ಳಬೇಕು. ಸೋನಿಯಾ ಗಾಂಧಿ ಅವರು ಯುಪಿಎ ಅಧ್ಯಕ್ಷೆಯಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿ ಆಗಿದ್ದಾಗ ಇದನ್ನು ಜಾರಿಗೆ ತರಲಾಗಿತ್ತು. ಆದರೆ ಬಿಜೆಪಿಯ ಕೇಂದ್ರ ಸರ್ಕಾರ ಬಡವರಿಗೆ ಅಕ್ಕಿ ಯೋಜನೆ ಜಾರಿ ಮಾಡಿದೆ ಎಂದು ಕೆಲವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಇದು ಯುಪಿಎ ಸರ್ಕಾರದ ಯೋಜನೆ ಎಂಬುದು ಸತ್ಯ. ನಮ್ಮ ರಾಜ್ಯದಲ್ಲಿ ಮಾತ್ರ ಅನ್ನಭಾಗ್ಯ ಯೋಜನೆ ಮೂಲಕ ಜನರಿಗೆ ಉಚಿತವಾಗಿ ಅಕ್ಕಿ ನೀಡಿ, ರಾಜ್ಯವನ್ನು ಹಸಿವುಮುಕ್ತ ಮಾಡುವ ಪ್ರಯತ್ನ ನಡೆದಿದೆ. ದೇಶದ ಬೇರೆ ಯಾವುದೇ ರಾಜ್ಯದಲ್ಲಿ ಈ ರೀತಿ ಜಾರಿ ಮಾಡಿಲ್ಲ.

ಈಗ ನಾವು ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದೇವೆ. 10 ಕೆ.ಜಿ ಅಕ್ಕಿ ನೀಡುವವರೆಗೂ ಹೆಚ್ಚುವರಿ ಐದು ಕೆ.ಜಿ ಅಕ್ಕಿಯ ಹಣವನ್ನು ಜನರಿಗೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇಂದು ಫಲಾನುಭವಿಗಳಿಗೆ ಹಣ ನೀಡುತ್ತಿದ್ದೇವೆ. ಪ್ರತಿ ನಿತ್ಯ ನಾಲ್ಕೈದು ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗಲಿದೆ. ಈ ವರ್ಷ ನಾವು ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಈ ಸಂದರ್ಭದಲ್ಲಿ ನಾನು ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಸದನದಲ್ಲಿ ಯಾರಿಗೆ ಉತ್ತರ ನೀಡಬೇಕೋ ನೀಡುತ್ತೇನೆ.

ನಾವು ಬಸವಣ್ಣನ ನಾಡಿನವರು, ನುಡಿದಂತೆ ನಡೆದಿದ್ದೇವೆ. ನಾನು ಈ ಹಿಂದೆ ಹೇಳಿದ್ದಂತೆ 200 ಯೂನಿಟ್ ಉಚಿತ, 2 ಸಾವಿರ ಖಚಿತ 10 ಕೆ.ಜಿ ಅಕ್ಕಿ ನಿಶ್ಚಿತ ಎಂಬುದನ್ನು ಮಾಡಿದ್ದೇವೆ. ನಮ್ಮ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ನಾವು ಈ ಅನ್ನಭಾಗ್ಯ ಯೋಜನೆಯನ್ನು ಯಾವ ರೀತಿ ಜಾರಿಗೆ ತರುತ್ತಿದ್ದೇವೆ ಎಂಬುದರ ಬಗ್ಗೆ ವಿವಿಧ ರಾಜ್ಯಗಳ ವಿವಿಧ ಪಕ್ಷಗಳ ನಾಯಕರು ಮಾಹಿತಿ ಪಡೆಯುತ್ತಿದ್ದಾರೆ. ದೇಶದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವಾಗಲು ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 4-5 ಸಾವಿರ ರೂಪಾಯಿಯಷ್ಟು ನೆರವಾಗಲಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಈ ರೀತಿ ನೆರವು ನೀಡುತ್ತಿದೆ. ಆಹಾರ ಸಚಿವರ ನೇತೃತ್ವದಲ್ಲಿ ಈ ಯೋಜನೆಯನ್ನು ಬಹಳ ಉತ್ತಮವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು

More News