GRUHA LAKSHMI SCHEME: ಗೃಹಲಕ್ಷ್ಮೀ ಯೋಜನೆ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ : ಅಸಮಾಧಾನ ಹೊರಹಾಕಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ :ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಅಗಸ್ಟ್ 30 ರಂದು ಚಾಲನೆ ಸಿಗಲಿದೆ. ಆದರೆ, ಈ ಹಿಂದೆ ನಿಗಧಿಯಾಗಿದ್ದ ಬೆಳಗಾವಿ ಬದಲಾಗಿ ಮೈಸೂರು ಜಿಲ್ಲೆಯಲ್ಲಿ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ದೊರೆಯಲಿದೆ. ಸ್ಥಳ ಬದಲಾವಣೆಗೆ ಬೆಳಗಾವಿ ಉಸ್ತುವಾರಿ ಸಚಿವ ಹಾಗೂ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೇ ಬೆಳಗಾವಿಯಲ್ಲಿ ಯೋಜನೆ ಚಾಲನೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಲಾಗಿತ್ತು. ಅದರಂತೆಯೇ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಲಾಗಿದೆ. ಆದರೆ ಇದೀಗ ಕಾರ್ಯಕ್ರಮವನ್ನು ಸ್ಥಳಾಂತರಿಸಲಾಗಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ತಿಳಿಸಲಾಗಿತ್ತು.
ಇದಕ್ಕೆ ಮುಖ್ಯಮಂತ್ರಿ ಮತ್ತು ಕಾಂಂಗ್ರೆಸ್ ಹೈಕಮಾಂಡ್ ಕಾರಣ ನೀಡಬೇಕು. ನಾನು ಕಾರಣ ನೀಡಲು ಸಾಧ್ಯವಿಲ್ಲ, ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿಯವರು ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅದೇ ದಿನ ಕಾರ್ಯಕ್ರಮ ನಿಗಧಿಯಾಗಿದೆ. ಅಲ್ಲಿಂದ ಅವರು ಆಗಮಿಸಲು ನೆರವಾಗಲು ಮೈಸೂರಿನಲ್ಲಿ ಕಾರ್ಯಕ್ರಮ ಸ್ಥಳಾಂತರಿಸಲಾಗಿದೆ ಎಂದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಬಿಜೆಪಿ ಮತ್ತು ಜೆಡಿಎಸ್ ನಿಂದ ಯಾರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ನನಗಿಲ್ಲ ಎಂದು ತಿಳಿಸಿದ ಅವರು, ರಾಜ್ಯ ಮಟ್ಟದ ನಾಯಕರನ್ನು ಅವರು ಸಂಪರ್ಕಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಯಾರೂ ಕೂಡ ಕಾಂಗ್ರೆಸ್ ನತ್ತ ಮುಖ ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

More News