ಮಂಗಳೂರು : ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮಗಳು ಸೌಜನ್ಯಳಿಗೆ ನ್ಯಾಯ ದೊರಕಿಸಿ ಕೊಡಲು ಅವರ ತಾಯಿ ಕುಸುಮಾವತಿ ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ದಕ್ಷಿಣ ಕನ್ನಡದ ಬಿಜೆಪಿ ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ಭಾನುವಾರ ಬೆಳ್ತಂಗಡಿಯಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸೌಜನ್ಯ ಅವರ ತಾಯಿ ಕುಸುಮಾವತಿ, ಪ್ರಕರಣ ಸಂಬಂಧ ಸಮಗ್ರವಾದ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಕಳೆದ 11 ವರ್ಷಗಳಿಂದ ತಮ್ಮ ಮಗಳಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಸಂಸದರು ಧ್ವನಿ ಎತ್ತಲಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಬೇಸರ ವ್ಯಕ್ತಪಡಿಸಿದರಲ್ಲದೆ, ಇದೀಗ ಧ್ವನಿ ಎತ್ತಿದ್ದಾರೆ. ಮಗಳಿಗೆ ನ್ಯಾಯ ದೊರಕಿಸಿಕೊಡಲು ಮನವಿ ಮಾಡಿದರು.
ಈ ನಡುವೆ ಸೌಜನ್ಯ ಅವರ ಕುಟುಂಬ ಅಣ್ಣಪ್ಪ ಸ್ವಾಮಿ ಬೆಟ್ಟದವರಿಗೆ ಪಾದಯಾತ್ರೆ ನಡೆಸಿ ಅಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.




