ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಮದ್ಯ ಮಾರಾಟವನ್ನು ನಗರ ಪೊಲೀಸ್ ಆಯುಕ್ತರು ನಿಷೇಧಿಸಿದ್ದಾರೆ.
ಇಂದು ಸಂಜೆ ಐದು ಗಂಟೆಯಿಂದ ಅಕ್ಟೋಬರ್ 31ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳು, ವೈನ್ ಶಾಷ್, ಇನ್ನಿತರ ಯಾವುದೇ ರೀತಿಯಲ್ಲಿ ಮದ್ಯ ಮಾರಾಟವನ್ನು ಮಾಡದಿರಲು ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ರಾಜ್ಯದ ನಾನಾ ಭಾಗಗಳಿಂದ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಬೆಂಗಳೂರು ನಗರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅವರ ನಿವಾಸ, ಆಸ್ಪತ್ರೆ, ಕಂಠೀರವ ಕ್ರೀಡಾಂಗಣದಲ್ಲಿ ಸೇರುತ್ತಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಮದ್ಯದ ಅಮಲಿನಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




