ಉಡುಪಿ : ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ಬೆಂಬಲಿಸಿ, ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹಾಗೂ ಬಿಜೆಪಿ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಂಡಿರುವ ಅವರಿಗೆ ಹಾಗೂ ಅವರಿಗೆ ಸಹಾಯ ಮಾಡಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಈ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ ಅವರು, ನನಗೆ ಚೈತ್ರಾ ಕುಂದಾಪುರ ಜತೆ ಯಾವುದೇ ರೀತಿಯ ವೈಯಕ್ತಿಕ ಸಂಪರ್ಕವಿಲ್ಲ. ಎಲ್ಲೋ ಒಂದೆರೆಡು ಕಡೆ ಕಾರ್ಯಕ್ರಮದಲ್ಲಿ ಫೋಟೋ ತೆಗೆದಿರಬಹುದಷ್ಟೇ ಎಂದು ಸ್ಪಷ್ಟಪಡಿಸಿದರು.




