ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತ, ಹಂತವಾಗಿ ಶಾಲಾ ಕಾಲೇಜುಗಳನ್ನು ಈಗಾಗಲೇ ತೆರೆದಿದ್ದು, ಈಗ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಮುಂದಾಗಿದೆ.
ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಈ ಮಾರ್ಗಸೂಚಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದೆ. ಕೋವಿಡ್ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಮಾತ್ರ ಅಂಗನವಾಡಿ ಕೇಂದಗಳನ್ನು ಆರಂಭಿಸಲು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹಾಗೆಯೇ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮತ್ತು ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆಯನ್ನು ಪಡೆದುಕೊಂಡಿರಬೇಕು ಎಂದು ಸೂಚಿಸಿದೆ.
ಅಂಗವಾಡಿ ಕೇಂದ್ರವನ್ನು ಆರಂಭಿಸುವ ಮುನ್ನ ಸ್ಥಳೀಯ ಗ್ರಾಮ ಪಂಚಾಯತಿಗೆ ಕಡ್ಡಾಯವಾಗಿ ಮಾಹಿತಿಯನ್ನು ನೀಡತಕ್ಕದ್ದು, ಹಾಗೆಯೇ ಅಂಗನವಾಡಿ ಕೇಂದ್ರವನ್ನು ರಾಸಾಯನಿಕ ದ್ರಾವಣ ಸಿಂಪಡಿಸಿ, ಸ್ವಚ್ಚಗೊಳಿಸಬೇಕು, ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಲು ಪೋಷಕರ ಅನುಮತಿ ಪತ್ರ ಕಡ್ಡಾಯ ಪಡೆದಿರಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.




