RAMALINGA REDDY: ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲ ಸೌಕರ್ಯ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ ಸುವರ್ಣಸೌಧ: ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಒಂದು ವರ್ಷದೊಳಗೆ ಅಗತ್ಯ ಮೂಲಸೌಕರ್ಯಗಳನ್ನು ಸರಕಾರ ಕಲ್ಪಿಸಿಕೊಡಲಿದೆ. ಹಾಗೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಿಟ್ ಅರ್ಜಿಗಳನ್ನು ಇತ್ಯರ್ಥಪಡಿಸಿದ ಬಳಿಕ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನತೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು

ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದಸ್ಯ ಸುರೇಶಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಅವರು, ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದರಿಂದ ಜನರು ಸಮಸ್ಯೆ ಅನುಭವಿಸುತ್ತಿರುವುದು ಗಮನದಲ್ಲಿದ್ದು, ಅದನ್ನು ವರ್ಷದೊಳಗೆ ಪರಿಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ, ರೆವಿನ್ಯೂ ನಿವೇಶನಗಳನ್ನು ರಚಿಸಿ ಮಾರಾಟ ಮಾಡಿರುವುದು, ಹೈಕೋರ್ಟ್ನಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಬಡಾವಣೆ ನಿರ್ಮಾಣಕ್ಕಾಗಿ 1400 ಎಕರೆ ಭೂಸ್ವಾಧೀನ ಮಾಡುವುದಕ್ಕೆ ಸರಕಾರಕ್ಕೆ ಸಮಸ್ಯೆಯಾಗಿದೆ ಎಂದರು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ರಿಟ್ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸಲು ಕ್ರಮವಹಿಸಲಾಗುತ್ತಿದೆ. ಇತ್ಯರ್ಥಪಡಿಸಿದ ನಂತರ ಭೂಸ್ವಾಧೀನತೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಹಂಚಿಕೆದಾರರು ತಮ್ಮ ನಿವೇಶನದಲ್ಲಿ ಮನೆ ಕಟ್ಟಿಕೊಳ್ಳಲು ಆನ್‌ಲೈನ್ ಅನುಮೋದನೆ ಪಡೆಯಲು ಸೆಂಟರ್ ಫಾರ್ ಇ-ಗವರ್ನನ್ಸ್ ರವರು ಅಗತ್ಯ ತಾಂತ್ರಿಕ ಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಆರು ತಿಂಗಳ ಕಾಲಾವಧಿಯಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಯೋಜಿಸಲಾಗಿದೆ ಎಂದರು.

More News

You cannot copy content of this page