ಬೆಂಗಳೂರು : ಸಿಂಧಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಗರಿಷ್ಠ ಮತಗಳ ಅಂತರದಿಂದ ನಾವು ಗೆದ್ದಿದ್ದೇವೆ. ಗರಿಷ್ಠ ಪ್ರಯತ್ನ ನಡೆದರೂ ಕಡಿಮೆ ಮತಗಳ ಅಂತರದಿಂದ ನಾವು ಹಾನಗಲ್ ಕ್ಷೇತ್ರದಲ್ಲಿ ಸೋತಿದ್ದೇವೆ ಎಂದು ಬಿಜೆಪಿ ರಾಜ್ಯ ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅಭಿಪ್ರಾಯಪಟ್ಟರು.
ಬೆಂಗಳೂರಿನ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಾನಗಲ್ ನಲ್ಲಿ ಪಕ್ಷದ ಕಾರ್ಯಕರ್ತರು ವಿಶೇಷ ಶ್ರಮದಿಂದ ದುಡಿದಿದ್ದಾರೆ. ಮುಖ್ಯಮಂತ್ರಿಗಳು, ಸಚಿವರು ಮತ್ತು ಪಕ್ಷದ ಮುಖಂಡರು ಹೆಚ್ಚಿನ ಶ್ರಮ ವಹಿಸಿದ್ದಾರೆ. ಆದರೂ ನಾವು ಕಡಿಮೆ ಮತಗಳ ಅಂತರದಿಂದ ಸೋತಿದ್ದೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿ, ರಾಜ್ಯಾಧ್ಯಕ್ಷರ ಬದಲಾವಣೆ ಕೇವಲ ಉಹಾಪೋಹ
ಮುಖ್ಯಮಂತ್ರಿಗಳ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ನೀವ್ಯಾಕೆ ಇಂಥ ಪ್ರಶ್ನೆ ಕೇಳುತ್ತಿದ್ದೀರಿ ಎಂದು ಮರುಪ್ರಶ್ನೆ ಹಾಕಿದರು. ಇವೆಲ್ಲ ಕೇವಲ ಊಹಾಪೋಹ ಎಂದ ಅವರು, ಇದು ಕಾಂಗ್ರೆಸ್ ಧ್ವನಿಯಷ್ಟೇ. ಕಾಂಗ್ರೆಸ್ ಇಂಥ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷವು ಜನರ ಪರವಾಗಿ ಕೆಲಸ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಇಂಥಹ ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಅವರಿಗೆ ವಾಸ್ತವಿಕತೆಯ ಅರಿವಿಲ್ಲ. ಕಾಂಗ್ರೆಸ್ ಪಕ್ಷವು ದೇಶದೆಲ್ಲೆಡೆ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಟೀಕಿಸಿದರು.

ಪಕ್ಷದ ರಾಜ್ಯಾಧ್ಯಕ್ಷರು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದ ಅವರು, ಪಕ್ಷವನ್ನು ಸದೃಢಗೊಳಿಸುವುದು, ಮುಂದಿನ ಚುನಾವಣೆಗಳ ಕುರಿತು ನಾಳೆ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯವರು ಶಾಮೀಲು ವಿಚಾರ
ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರು ಶಾಮೀಲಾಗಿರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನ ಆರೋಪದಲ್ಲಿ ಹುರುಳಿಲ್ಲ, ಬೇಸ್ ಲೆಸ್ ಆಗಿ ಕಾಂಗ್ರೆಸ್ ಆರೋಪ ಮಾಡುತ್ತಿದೆ ಎಂದರಲ್ಲದೆ, ಬೇಸ್ ಲೆಸ್ ಪಕ್ಷ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಟ್ ಕಾಯಿನ್ ಹಗರಣ ಸಂಬಂಧ ನಮ್ಮ ಮುಖ್ಯಮಂತ್ರಿಗಳು ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ, ಕಾಂಗ್ರೆಸ್ ಗೆ ಆರೋಪ ಮಾಡಲು ಯಾವುದೇ ವಿಷಯಗಳಿಲ್ಲ, ಅವರ ನಡುವೆಯೇ ಸಾಕಷ್ಟು ಗೊಂದಲಗಳಿವೆ, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆಯೇ ದೊಡ್ಡ ಸಮಸ್ಯೆ ಇದೆ, ಯಾವುದೇ ಹೋರಾಟಕ್ಕೆ ಕಾಂಗ್ರೆಸ್ ಗೆ ವಿಷಯಗಳಿಲ್ಲ ಎಂದು ಆರೋಪಿಸಿದರು.
2023 ರ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಅಭಿಪ್ರಾಯವ್ಯಕ್ತಪಡಿಸಿದ ಅವರು, ಪೆಟ್ರೋಲ್ ಡೀಸೆಲ್ ಬೆಲೆಯನ್ನು ನಾವು ಕಡಿಮೆ ಮಾಡಿದ್ದೇವೆ ಈ ಹಿನ್ನೆಲೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಆಶಾವಾದ ವ್ಯಕ್ತಪಡಿಸಿದರು.




