ಹಾವೇರಿ : ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾವೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆಗೆ ಬೇಕಾದ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದೆ. ಫೆಬ್ರವರಿಯಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದು ತಿಳಿಸಿದರು.
ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ರೈತರಿಗೆ ಪುನಃ ಪರಿಹಾರ
ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರೈತರಿಗೆ 2000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದರು.
ಮನುಷ್ಯತ್ವ ಇರಬೇಕು
ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡುವುದನ್ನು ಕಲಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಇರಬೇಕು ಎಂದರು.




