ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈ ಎಸ್ ಶರ್ಮಿಳಾ ಅವರನ್ನು ಇಂದು ಆಂಧ್ರಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ಶರ್ಮಿಳಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು. ಹಾಗೆಯೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದರು. ನಂತರ ಶರ್ಮಿಳಾ ಅವರು ಸ್ಥಾಪಿಸಿದ್ದ ವೈಎಸ್ ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ನಲ್ಲಿ ವಿಲೀನಗೊಳಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕಟಣೆಯಲ್ಲಿ ವೈ ಎಸ್ ಶರ್ಮಿಳಾ ಅವರನ್ನು ಆಂಧ್ರ ರಾಜ್ಯ ಘಟಕದ ನೂತನ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದರು. ಆಂಧ್ರದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಿಡುಗು ರುದ್ದರಾಜು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.





