ಕ್ಯಾನ್ಬೆರಾ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ತಡರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶ್ವಕಪ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಇತ್ತೀಚಿನ ವರದಿಯ ಪ್ರಕಾರ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಫೆಬ್ರವರಿ 09 ರಿಂದ ವೆಸ್ಟ್ ಇಂಡೀಸ್ ಸರಣಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇವರು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಬೆನ್ನಲುಬಾಗಿದ್ದಾರೆ. ದಿ ಡೈಲಿ ಟೆಲಿಗ್ರಾಫ್ ಪ್ರಕಾರ, ಅಡಿಲೇಡ್ ನಲ್ಲಿ ಸಂಗೀತ ಕಚೇರಿ ಕಾರ್ಯಕ್ರಮವೊಂದರಲ್ಲಿ ಮದ್ಯ ಸೇವಿಸುತ್ತಿದ್ದಾಗ ಅವರು ಅನಾರೋಗ್ಯಕ್ಕೀಡಾಗಿದ್ದರು. ಕೂಡಲೇ ಅವರನ್ನು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಪಡೆದ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ಜಾರ್ಜ್ ಮಾಡಲಾಗಿದೆ ಎಂದು ತಿಳಿಸಿದೆ. ಆದರೆ ಅವರ ಅನಾರೋಗ್ಯಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.