ಬಿಟ್ ಕಾಯಿನ್ ರೂವಾರಿ ಎನ್ನಲಾದ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ಸರಣಿ ಟ್ವೀಟ್ ಮಾಡಿ ಒತ್ತಾಯಿಸಿರುವ ಸಿದ್ದರಾಮಯ್ಯ ಅವರು, ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಶಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಆತನಿಗೆ ಸೂಕ್ತ ರೀತಿಯ ಭದ್ರತೆ ನೀಡಬೇಕಾಗಿ ಎಂದು ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ ಹಗರಣ ಸ್ಫೋಟಗೊಂಡ ನಂತರ ಸಣ್ಣ ಮಟ್ಟದ ಆರೋಪದ ಮೇಲೆ ನಾಟಕೀಯವಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದಿದ್ದಾರೆ.

ಅಲ್ಲದೆ ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಸೇವಿಸುವ ಚಟ ಇದ್ದುದ್ದಾಗಿ ಹೇಳಲಾಗಿದೆ. ಈ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತಮ್ಮ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು ಎನ್ನುವುದು ಗಮನಾರ್ಹ ಅಂಶವಾಗಿದೆ ಎಂದಿದ್ದಾರೆ.

ಶ್ರೀಕಿ ಈಗಲೂ ಡ್ರಗ್ಸ್ ವ್ಯಸನಿಯೇ, ವ್ಯಸನಿಯಾಗಿದ್ದರೆ ಪೊಲೀಸರು ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ, ಡ್ರಗ್ಸ್ ವ್ಯಸನಿ ಎನ್ನುವುದು ಪರೀಕ್ಷೆಯಿಂದ ದೃಢಪಟ್ಟಿದ್ದರೆ ಸೂಕ್ತ ಚಿಕಿತ್ಸೆ ನೀಡಲಾಗಿದೆಯೇ, ಈ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿತವಾಗಿರುವ ಬಿಳಿ ಕಾಲರ್ ಅಪರಾಧ, ಇದಕ್ಕೆ ಸಂಬಂಧಿಸಿದ ಖಾತೆಗಳ ಪಾಸ್ ವರ್ಡ್ ಸೇರಿದಂತೆ ಬಹಳಷ್ಟು ಮಾಹಿತಿಗಳು ಶ್ರೀಕಿಯ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಶ್ರೀಕಿಯ ಪ್ರಾಣಕ್ಕೆ ಅಪಾಯದ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

More News