ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು ಹಾಗೂ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಹಾಸನದಲ್ಲಿ ಆಹಾರ ನಿರೀಕ್ಷಕ ಜಗನ್ನಾಥ್ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೆಯೇ ಅವರ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಮತ್ತು ಕಚೇರಿಯ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರಿನ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಪಿಡಬ್ಲ್ಯೂಡಿ ಇಲಾಖೆ ಇಇ ಹರ್ಷ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅವರ ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ಮನೆ, ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಲಾಗಿದ್ದು, ಅವರ ಮೈಸೂರಿನ ಜೆಪಿ ನಗರದಲ್ಲಿರುವ ಮನೆ, ವಿಜಯನಗರದಲ್ಲಿರುವ ಅಪಾರ್ಟ್ ಮೆಂಟ್, ಕೆ ಆರ್ ನಗರದಲ್ಲಿರುವ ಅವರ ಸಹೋದರ ಮನೆ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ತುಮಕೂರಿನ ಕೆಆರ್ ಡಿಎಸ್ ಇಂಜಿನಿಯರ್ ಹನುಮಂತರಾಯಪ್ಪ ಅವರ ಮನೆ ಮತ್ತು ಕಚೇರಿಯ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.




