MODI, SHAH, NADDA AND KUMARASWAMY WILL DECIDE HIS CONTEST: ಜೆಡಿಎಸ್ -ಬಿಜೆಪಿ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿ: ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ: ಹೆಚ್ ಡಿ ದೇವೇಗೌಡರು

ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲಾ ಅಂತಿಮ ಆಗುತ್ತದೆ ಎಂದರು ಅವರು ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಮತ್ತೊಂದು ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಅವರು; ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್ ಪಕ್ಷಕ್ಕೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು ಸಮಾಲೋಚನೆ ಮಾಡುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕಾ ಬೇಡವಾ ಎನ್ನುವ ಅಂಶವನ್ನು ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದರು.

ಬಿಜೆಪಿ ಟಿಕೆಟ್ ವಿಚಾರವಾಗಿ ಕೆಲವು ಕ್ಷೇತ್ರಗಳ ಅಭಿಪ್ರಾಯ ಕೇಳಬಹುದು. ಆಗ ಅಭಿಪ್ರಾಯವನ್ನು ಹೇಳುತ್ತೇವೆ. ಮೈತ್ರಿ ಧರ್ಮವನ್ನು ನಾವು ಪಾಲಿಸುತ್ತೇವೆ. ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ ಕೆಲಸ ಮಾಡುತ್ತೇವೆ ಎಂದರು ಅವರು.
ಚುನಾವಣೆ ಅಧಿಸೂಚನೆ ಆದ ಬಳಿಕ ರಾಜ್ಯದಲ್ಲಿ ನನ್ನ ಪ್ರವಾಸದ ಬಗ್ಗೆ ನಿರ್ಧಾರ ಮಾಡಲಾಗುವುದು. ಮೋದಿ ಅವರದ್ದು ಬಹಳ ಸ್ಪೀಡ್ ಇದೆ, 10 ದಿನಗಳಲ್ಲಿ ಹಲವಾರು ರಾಜ್ಯಗಳಲ್ಲಿ ಅವರು ಪ್ರವಾಸ ಮಾಡುತ್ತಿದ್ದಾರೆ. ಆದರೆ, ನಾನು ಎಲ್ಲಿಗೆ ಕರೆದರೆ ಅಲ್ಲಿಗೆ ಹೋಗುತ್ತೇನೆ. ಯಾವ ಜಿಲ್ಲೆಗೆ ಕರೆದರೂ ಹೋಗುತ್ತೇನೆ. ಕುಮಾರಸ್ವಾಮಿ ಅವರು ಸೇರಿದಂತೆ ಜೆಡಿಎಸ್ ನಾಯಕರು ಎಲ್ಲರೂ ಪ್ರವಾಸ ಮಾಡುತ್ತಾರೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಜೆಡಿಎಸ್ ಮತ್ತು ಬಿಜೆಪಿ ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು; ಹೆಚ್.ಡಿ.ಕುಮಾರಸ್ವಾಮಿ ಅವರು, ಮೋದಿ ಮತ್ತು ಅಮಿತ್ ಶಾ ಅವರುಗಳು ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ನಡೆಯಬಹುದು ಎಂದರು.
ಬೆಂಗಳೂರು ಸ್ಪೋಟ ಪ್ರಕರಣ:
ಬೆಂಗಳೂರಿನಲ್ಲಿ ಸ್ಪೋಟ ಸಂಭವಿಸಿದ ಪ್ರಕರಣವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸೂಕ್ಷ್ಮವಾಗಿ ನಿಭಾಯಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಅವರಿಬ್ಬರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಸರಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಅನಿಸುತ್ತಿದೆ ಎಂದರು.
ಜೆಡಿಎಸ್; ರಾಜ್ಯ ನೂತನ ಅಧ್ಯಕ್ಷರ ಪದಗ್ರಹಣ
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿಗಳ ಸಮಕ್ಷಮದಲ್ಲಿ ರಶ್ಮಿ ರಾಮೇಗೌಡ ಅವರು ನಿಕಟಪೂರ್ವ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್ ಅವರಿಂದ ಪಕ್ಷದ ಭಾವುಟ ಸ್ವೀಕರಿಸುವ ಮೂಲಕ ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದಗ್ರಹಣ ಮಾಡಿದರು.

More News

You cannot copy content of this page